ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯು ಮಂಗಳೂರು ನಗರದಲ್ಲಿ ಹೃದಯವಿದ್ರಾವಕ ದುರಂತವೊಂದಕ್ಕೆ ಮುನ್ನುಡಿ ಬರೆದಿದೆ . ನಗರದ ಕಂಕನಾಡಿ ಸಮೀಪದ ನಾಗೂರಿಯಲ್ಲಿ ತಡೆಗೋಡೆ ಕುಸಿದು ಹಳೆಯ ಹಂಚಿನ ಮನೆಯ ಮೇಲೆ ಬಿದ್ದ ಪರಿಣಾಮ ನಿದ್ರೆಯಲ್ಲಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಅವಶೇಷಗಳಡಿ ಸಿಲುಕಿದ್ದ ಬಿಹಾರ ಮೂಲದ ಶಾಂತ (46), ಅನಾಮಿಕ ಚೌರಾಸಿಯಾ (8) ಹಾಗೂ ಪರಿ (4) ಅವರನ್ನು ಹೊರತೆಗೆದಾಗ ಅವರು ಮೃತಪಟ್ಟಿರುವುದು ದೃಢಪಟ್ಟಿದೆ.
ದುರಂತದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು, ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಅವಶೇಷಗಳಡಿ ಸಿಲುಕಿದ್ದ ಒಬ್ಬ ಪುರುಷ ಹಾಗೂ ಇಬ್ಬರು ಬಾಲಕಿಯರನ್ನು ಜೀವಂತವಾಗಿ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಯಿತು. ಗಾಯಾಳುಗಳಿಗೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.



ಇದೇ ವೇಳೆ ಪಕ್ಕದ ಮನೆಯಲ್ಲಿ ವಾಸವಿದ್ದ ಉಡುಪಿ ಮೂಲದ ಬಾಲಕೃಷ್ಣ ಅವರ ಪತ್ನಿ ಶಾಂತಾ ಅವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದರಿಂದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಮೃತ ಕುಟುಂಬವು ಮೂಲತಃ ಬಿಹಾರ ರಾಜ್ಯದವರಾಗಿದ್ದು, ಕಳೆದ ಸುಮಾರು 20 ವರ್ಷಗಳಿಂದ ಕಂಕನಾಡಿ ಪೊಲೀಸ್ ಠಾಣೆಯ ಹಿಂಭಾಗದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಕುಸಿದ ತಡೆಗೋಡೆಯ ಕೆಳಭಾಗದಲ್ಲೇ ನಾಲ್ಕು ಬಾಡಿಗೆ ಮನೆಗಳಿದ್ದು, ಅವುಗಳಲ್ಲಿ ನಾಲ್ಕು ಕುಟುಂಬಗಳು ನೆಲೆಸಿದ್ದವು. ಅಪಾಯದ ಸಾಧ್ಯತೆ ಇದ್ದರೂ ಬಾಡಿಗೆದಾರರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಅದೇ ಮನೆಯಲ್ಲಿ ವಾಸಿಸಲು ಅವಕಾಶ ನೀಡಲಾಗಿತ್ತು ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ.
ತಡೆಗೋಡೆ ಕುಸಿತದಿಂದ ಎರಡು ಕುಟುಂಬಗಳ ಮನೆಗಳಿಗೆ ತೀವ್ರ ಹಾನಿಯಾಗಿದ್ದು, ನಾಲ್ಕು ಮನೆಗಳ ಹಿಂಭಾಗದ ಕಾಂಪೌಂಡ್ ಗೋಡೆ ಸಂಪೂರ್ಣವಾಗಿ ನೆಲಸಮವಾಗಿದೆ.
ಘಟನೆಯ ಕುರಿತು ಜಿಲ್ಲಾ ಆಡಳಿತದೊಂದಿಗೆ ದೂರವಾಣಿ ಮೂಲಕ ಮಾತನಾಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಹಾಗೂ ಮೃತರ ಕುಟುಂಬಗಳಿಗೆ ತಕ್ಷಣವೇ ಪರಿಹಾರ ಧನ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ


