ಮಂಗಳೂರು ಗುಡ್ಡ ಕುಸಿತ ದುರಂತ: ಮೃತರ ಕುಟುಂಬಗಳಿಗೆ ಪರಿಹಾರ, ಶಾಶ್ವತ ಪುನರ್ವಸತಿಗೆ ಎಸ್‌ಡಿಟಿಯು ಆಗ್ರಹ

ಮಂಗಳೂರು, ಜು. 1: ನಗರದ ಗರೋಡಿ ಪ್ರದೇಶದಲ್ಲಿ ಭಾರೀ ಮಳೆಯಿಂದ ಸಂಭವಿಸಿದ ಗುಡ್ಡ ಕುಸಿತದಲ್ಲಿ ಇಬ್ಬರು ಮಕ್ಕಳು ಹಾಗೂ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ಅತ್ಯಂತ ದುಃಖಕರವಾಗಿದೆ ಎಂದು ಎಸ್‌ಡಿಟಿಯು ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷ ಇರ್ಫಾನ್ ಕಾನ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಕ್ಷಣವೇ ಸಮರ್ಪಕ ಪರಿಹಾರ ಘೋಷಿಸಬೇಕು. ಗಾಯಾಳುಗಳಿಗೆ ಉಚಿತ ಹಾಗೂ ಗುಣಮಟ್ಟದ ಚಿಕಿತ್ಸೆ ಒದಗಿಸುವುದರೊಂದಿಗೆ, ಮನೆ ಹಾಗೂ ಆಸ್ತಿಪಾಸ್ತಿ ಕಳೆದುಕೊಂಡ ಕುಟುಂಬಗಳಿಗೆ ಶಾಶ್ವತ ಪುನರ್ವಸತಿ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಮಳೆಗಾಲದಲ್ಲಿ ಗುಡ್ಡ ಕುಸಿತ ಸಂಭವಿಸುವ ಸಾಧ್ಯತೆ ಇರುವ ಪ್ರದೇಶಗಳನ್ನು ಮುಂಚಿತವಾಗಿ ಗುರುತಿಸಿ, ಅಪಾಯದ ವಲಯದಲ್ಲಿರುವ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವುದು ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಆಡಳಿತದ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಇಂತಹ ದುರಂತಗಳು ಮರುಕಳಿಸದಂತೆ ಸಂಬಂಧಿತ ಇಲಾಖೆಗಳು ವೈಜ್ಞಾನಿಕ ಅಧ್ಯಯನ ನಡೆಸಿ ಶಾಶ್ವತ ತಡೆ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ ಅವರು, ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!