ಮಧ್ಯಾಹ್ನದ ಬಳಿಕ ಧಾರಾಕಾರ ಮಳೆ; ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತ
ಮಂಗಳೂರು, ಜು. 2: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮತ್ತೆ ಜೋರಾಗಿದ್ದು, ಮಧ್ಯಾಹ್ನದ ಬಳಿಕ ಮಂಗಳೂರು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗಿದೆ. ಬೆಳಿಗ್ಗೆ ಮಳೆ ಪ್ರಮಾಣ ಕಡಿಮೆಯಾಗಿದ್ದರೂ, ನಂತರ ಸುರಿದ ನಿರಂತರ ಮಳೆಯಿಂದ ಹಲವು ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನದ ಮೇಲೆ ಪರಿಣಾಮ ಬೀರಿದೆ.
ನಿನ್ನೆ ಮಂಗಳೂರಿನ ನಾಗುರಿಯಲ್ಲಿ ಮನೆ ಮೇಲಕ್ಕೆ ಕಾಂಪೌಂಡ್ ಗೋಡೆ ಕುಸಿದು ಮೂವರು ಮೃತಪಟ್ಟ ದುರಂತದ ಬಳಿಕ ಜಿಲ್ಲೆಯಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಿದ್ದು, ಅಪಾಯದ ಪ್ರದೇಶಗಳ ಮೇಲೆ ನಿರಂತರ ನಿಗಾ ಇರಿಸಿದೆ.

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯವಾಗಿ ಹೊರಗೆ ಸಂಚರಿಸದಂತೆ ಹಾಗೂ ಗುಡ್ಡ ಕುಸಿತ, ಮಣ್ಣಿನ ಕುಸಿತ ಮತ್ತು ಗೋಡೆ ಕುಸಿಯುವ ಸಾಧ್ಯತೆ ಇರುವ ಪ್ರದೇಶಗಳಿಂದ ದೂರವಿರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ತುರ್ತು ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆಗೆ ಸಂಬಂಧಿಸಿದ ಅಧಿಕಾರಿಗಳು ಸನ್ನದ್ಧರಾಗಿದ್ದಾರೆ. ಸಾರ್ವಜನಿಕರು ಹವಾಮಾನ ಇಲಾಖೆಯ ಎಚ್ಚರಿಕೆಗಳು ಮತ್ತು ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.


