ಕಾಸರಗೋಡಿನಲ್ಲಿ ಕನ್ನಡ ಪತ್ರಿಕಾ ದಿನಾಚರಣೆ; ಹಿರಿಯ ವಿತರಕ ಶ್ಯಾಮಪ್ರಸಾದ್‌ಗೆ ‘ಪತ್ರಿಕಾ ದಿನ’ ಪ್ರಶಸ್ತಿ

ವಸ್ತುನಿಷ್ಠ ವರದಿಗಾರಿಕೆ ಪತ್ರಿಕೆಗಳ ಹೊಣೆಗಾರಿಕೆ: ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ

ಕಾಸರಗೋಡು, ಜು. 2: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಕಾಸರಗೋಡು ಜಿಲ್ಲಾ ಘಟಕದ ಜಂಟಿ ಆಶ್ರಯದಲ್ಲಿ ಕನ್ನಡ ಪತ್ರಿಕಾ ದಿನಾಚರಣೆ ಹಾಗೂ ‘ಪತ್ರಿಕಾ ದಿನ’ ಪ್ರಶಸ್ತಿ ಪ್ರದಾನ ಸಮಾರಂಭವು ಕುಂಬಳೆ ಸಮೀಪದ ನಾಯ್ಕಾಪುವಿನ ಲಿಟಲ್ ಲಿಲ್ಲಿ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಬುಧವಾರ ನಡೆಯಿತು.

ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಉದ್ಘಾಟಿಸಿ ಮಾತನಾಡಿ, ವಸ್ತುನಿಷ್ಠ ಹಾಗೂ ಜವಾಬ್ದಾರಿಯುತ ವರದಿಗಾರಿಕೆ ಪತ್ರಿಕೆಗಳ ಪ್ರಮುಖ ಹೊಣೆಗಾರಿಕೆಯಾಗಿದೆ ಎಂದು ಹೇಳಿದರು. ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಗಡಿನಾಡಿನಲ್ಲಿ ಕನ್ನಡ ಪತ್ರಿಕೆಗಳು ಉಳಿದು ಬೆಳೆಯಬೇಕಾದ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಪತ್ರಿಕಾ ವಿತರಣಾ ಕ್ಷೇತ್ರದಲ್ಲಿ ಸುದೀರ್ಘ ಹಾಗೂ ನಿಸ್ವಾರ್ಥ ಸೇವೆ ಸಲ್ಲಿಸಿದ ಹಿರಿಯ ಪತ್ರಿಕಾ ವಿತರಕ ಶ್ಯಾಮಪ್ರಸಾದ್ ಎನ್. ಅವರಿಗೆ ಈ ಸಾಲಿನ ‘ಪತ್ರಿಕಾ ದಿನ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಪ್ರಶಸ್ತಿ ಪ್ರದಾನ ಮಾಡಿದ ಜಿಲ್ಲಾ ಪಂಚಾಯತ್ ಸದಸ್ಯ ಸೋಮಶೇಖರ ಜೆ.ಎಸ್. ಮಾತನಾಡಿ, ಪತ್ರಿಕೆಗಳು ಹಾಗೂ ಪತ್ರಕರ್ತರು ಇಂದು ಹಲವು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಪತ್ರಿಕೆಗಳ ಮಾರಾಟದಲ್ಲಿ ಕುಸಿತ, ಜಾಹೀರಾತು ಆದಾಯದ ಇಳಿಕೆ ಹಾಗೂ ಪತ್ರಕರ್ತರಿಗೆ ಸೂಕ್ತ ವೇತನ ದೊರೆಯದಂತಹ ಸಮಸ್ಯೆಗಳ ನಡುವೆಯೂ ಗಡಿನಾಡಿನ ಪತ್ರಕರ್ತರು ಸಲ್ಲಿಸುತ್ತಿರುವ ಸೇವೆ ಮಾದರಿಯಾಗಿದೆ ಎಂದು ಹೇಳಿದರು.

ಹಿರಿಯ ಕವಿ ಹಾಗೂ ಶಿಕ್ಷಣ ತಜ್ಞ ವಿ.ಬಿ. ಕುಳಮರ್ವ ಪತ್ರಿಕಾ ದಿನದ ಸಂದೇಶ ನೀಡಿದರು.

ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ರವಿ ನಾಯ್ಕಾಪು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯ ರಾಮಪ್ಪ ಮಂಜೇಶ್ವರ, ಕಾಸರಗೋಡು ಬ್ಲಾಕ್ ಪಂಚಾಯತ್ ಸದಸ್ಯ ಪ್ರಥ್ವಿರಾಜ್ ಶೆಟ್ಟಿ, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್. ಸುಬ್ಬಯ್ಯಕಟ್ಟೆ, ಕೆಯುಡಬ್ಲ್ಯೂಜೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಉಳಿಯತ್ತಡ್ಕ, ಲಿಟಲ್ ಲಿಲ್ಲಿ ಶಾಲೆಯ ಮುಖ್ಯಸ್ಥೆ ಸರಸ್ವತಿ ಎ., ನಿವೃತ್ತ ಪ್ರಾಂಶುಪಾಲ ಪ್ರೊ. ಎ. ಶ್ರೀನಾಥ್, ರಾಘವ ಚೇರಾಲ್ ಹಾಗೂ ಗಮಕ ಕಲಾ ಪರಿಷತ್ತಿನ ಗಡಿನಾಡ ಘಟಕದ ಅಧ್ಯಕ್ಷ ಟಿ. ಶಂಕರ ನಾರಾಯಣ ಭಟ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಗಂಗಾಧರ ತೆಕ್ಕೆಮೂಲೆ ಸ್ವಾಗತಿಸಿದರು. ಉಪಾಧ್ಯಕ್ಷ ಪುರುಷೋತ್ತಮ ಪೆರ್ಲ ವಂದಿಸಿದರು. ಪುರುಷೋತ್ತಮ ಭಟ್ ಕಾರ್ಯಕ್ರಮ ನಿರೂಪಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!