ಬಂಟ್ವಾಳ, ಜು. 4: ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಪಡೆದು ಸೈಬರ್ ವಂಚನೆಗೆ ಬಳಸಲು ಸಹಕರಿಸುತ್ತಿದ್ದ ಆರೋಪಿಯನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕುಡ್ತಮುಗೇರು ನಿವಾಸಿ ಜುಬೈರ್ (32) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಜುಲೈ 3ರಂದು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪ್ರಕರಣವು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 104/2025ರಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಕಲಂ 66(C), 66(D) ಹಾಗೂ ಭಾರತೀಯ ನ್ಯಾಯ ಸಂಹಿತೆ (BNS)ಯ ಕಲಂ 126(2), 308(6), 318(4), 319(2) ಮತ್ತು 3(5)ರಡಿ ದಾಖಲಾಗಿದೆ.
ತನಿಖೆ ವೇಳೆ ಆರೋಪಿಯ ವಿರುದ್ಧ ಈಗಾಗಲೇ ವಿಟ್ಲ ಪೊಲೀಸ್ ಠಾಣೆಯಲ್ಲಿ 2022ರಲ್ಲಿ ದಾಖಲಾಗಿದ್ದ ಪ್ರಕರಣ ಸೇರಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಹಲವು ಪ್ರಕರಣಗಳ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯು ಪೊಲೀಸರ ಬಂಧನದಿಂದಲೂ ತಪ್ಪಿಸಿಕೊಳ್ಳುತ್ತಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಪ್ರಕರಣದ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಠಾಣೆ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.


