ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಆಸ್ಪತ್ರೆ ಹಸ್ತಾಂತರ ಆದೇಶ ಹಿಂಪಡೆಯಲು ಆಗ್ರಹ
ಮಂಗಳೂರು, ಜುಲೈ 6: ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಿಗೆ ಹಸ್ತಾಂತರಿಸುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಸಿಪಿಐಎಂ ಮಂಗಳೂರು ಉತ್ತರ ಸಮಿತಿ ವತಿಯಿಂದ ಬೋಂದೆಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಮಾನವ ಸರಪಳಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಡಾ. ಕೃಷ್ಣಪ್ಪ ಕೊಂಚಾಡಿ, ಕಾರ್ಪೊರೇಟ್ ಆಸ್ಪತ್ರೆಗಳ ಪ್ರವೇಶದ ಬಳಿಕ ಆರೋಗ್ಯ ಸೇವೆಗಳು ಸಾಮಾನ್ಯ ಜನರ ಕೈಗೆಟುಕದಷ್ಟು ದುಬಾರಿಯಾಗಿವೆ. ಇದೀಗ ಸರ್ಕಾರ ಸರ್ಕಾರಿ ಆರೋಗ್ಯ ಸೇವೆಗಳನ್ನು ದುರ್ಬಲಗೊಳಿಸಿ, ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಆಸ್ಪತ್ರೆಗಳನ್ನು ಹಸ್ತಾಂತರಿಸುವ ಮೂಲಕ ಜನಸಾಮಾನ್ಯರ ಚಿಕಿತ್ಸೆಯ ಹಕ್ಕಿಗೆ ಧಕ್ಕೆ ತರುತ್ತಿದೆ ಎಂದು ಆರೋಪಿಸಿದರು.



ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಒಪ್ಪಿಸುವ ಆದೇಶವನ್ನು ಸರ್ಕಾರ ತಕ್ಷಣವೇ ಹಿಂಪಡೆಯಬೇಕು. ಅಲ್ಲದೆ, ಮಂಗಳೂರಿನಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆಯ ಘಟಕಗಳನ್ನು ಸ್ಥಾಪಿಸಿ ಸರ್ಕಾರಿ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ಅವರು ಆಗ್ರಹಿಸಿದರು.
ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಮಾತನಾಡಿ, ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಪರವಾಗಿ ಮಾತನಾಡುತ್ತಿರುವಂತೆ ಕಾಣುತ್ತಿದೆ. ಸರ್ಕಾರಿ ಆಸ್ಪತ್ರೆಗಳನ್ನು ದುರ್ಬಲಗೊಳಿಸಿ ಖಾಸಗಿ ಸಂಸ್ಥೆಗಳಿಗೆ ಅನುಕೂಲ ಮಾಡಿಕೊಡುವ ನಿಲುವು ಸರಿಯಲ್ಲ ಎಂದು ಟೀಕಿಸಿದರು.
ಬಳಿಕ ಕಾರ್ಯಕರ್ತರು ಬೋಂದೆಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಕೈಕೈ ಹಿಡಿದು ಮಾನವ ಸರಪಳಿ ನಿರ್ಮಿಸಿ, ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ಪ್ರಸ್ತಾಪವನ್ನು ಕೈಬಿಡುವಂತೆ ಘೋಷಣೆಗಳನ್ನು ಕೂಗಿದರು.
ಸಿಪಿಐಎಂ ಮಂಗಳೂರು ಉತ್ತರ ಸಮಿತಿ ಕಾರ್ಯದರ್ಶಿ ಪ್ರಮೀಳಾ ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ರವಿಚಂದ್ರ ಕೊಂಚಾಡಿ, ಶ್ರೀನಾಥ್ ಕುಲಾಲ್, ಕೃಷ್ಣ ತಣ್ಣೀರುಬಾವಿ, ನ್ಯಾಯವಾದಿ ಸುನಂದ ಕೊಂಚಾಡಿ, ನೌಷದ್ ಬಾವು ಪಂಜಿಮೊಗರು, ನಿತಿನ್ ಬಂಗೇರ, ಮುಸ್ತಫಾ ಪಂಜಿಮೊಗರು, ಅಶೋಕ್ ಶ್ರೀಯಾನ್, ಶಶಿ ಗುಂಡಳಿಕೆ, ಶಶಿಧರ ಶಕ್ತಿನಗರ, ಪ್ರವೀಣ್ ಕೊಂಚಾಡಿ, ಆಶಾ ಬೋಳೂರು ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


