ವೈದ್ಯರ ಕೊರತೆ, ಮೂಲಸೌಕರ್ಯ, ಔಷಧಿ ಲಭ್ಯತೆ ಕುರಿತು ಸರ್ಕಾರ ಕ್ರಮ ಕೈಗೊಳ್ಳಲು ಆಗ್ರಹ
ಬೆಂಗಳೂರು:, ಜುಲೈ 6: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆ, ಮೂಲಸೌಕರ್ಯಗಳ ಅಭಾವ, ಔಷಧಿಗಳ ಲಭ್ಯತೆ, ಸ್ವಚ್ಛತೆ ಹಾಗೂ ಆಡಳಿತಾತ್ಮಕ ಸಮಸ್ಯೆಗಳಿಂದ ಸಾರ್ವಜನಿಕ ಆರೋಗ್ಯ ಸೇವೆಗಳ ಗುಣಮಟ್ಟ ಕುಸಿದಿದೆ ಎಂದು ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ ಆರೋಪಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಡ ಹಾಗೂ ಮಧ್ಯಮ ವರ್ಗದ ಜನರು ಖಾಸಗಿ ಆಸ್ಪತ್ರೆಗಳ ದುಬಾರಿ ಚಿಕಿತ್ಸೆಯನ್ನು ಭರಿಸಲು ಸಾಧ್ಯವಾಗದೆ ಸರ್ಕಾರಿ ಆಸ್ಪತ್ರೆಗಳನ್ನೇ ಅವಲಂಬಿಸುತ್ತಿದ್ದಾರೆ. ಆದರೆ, ಅಲ್ಲಿಯೂ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿವೆ ಎಂದು ತಿಳಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಯ ಕೊರತೆಯಿಂದ ಹೊರರೋಗಿ ವಿಭಾಗದಲ್ಲಿ ರೋಗಿಗಳು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ತುರ್ತು ಚಿಕಿತ್ಸೆಯ ಸಂದರ್ಭದಲ್ಲಿಯೂ ಸಮಯೋಚಿತ ಸೇವೆ ದೊರೆಯದಿರುವ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಅಗತ್ಯ ವೈದ್ಯಕೀಯ ಉಪಕರಣಗಳು, ಹಾಸಿಗೆಗಳು, ಕುಡಿಯುವ ನೀರು ಹಾಗೂ ನಿರಂತರ ವಿದ್ಯುತ್ ಪೂರೈಕೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯೂ ಹಲವು ಆಸ್ಪತ್ರೆಗಳಲ್ಲಿ ಕಂಡುಬರುತ್ತಿದೆ. ಆಸ್ಪತ್ರೆಗಳ ಸ್ವಚ್ಛತೆ ಮತ್ತು ನೈರ್ಮಲ್ಯ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸುವ ಅಗತ್ಯವಿದೆ ಎಂದು ಅವರು ಒತ್ತಾಯಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಾಗಬೇಕಾದ ಔಷಧಿಗಳು ಹಲವು ಸಂದರ್ಭಗಳಲ್ಲಿ ದೊರೆಯದ ಕಾರಣ ರೋಗಿಗಳು ಖಾಸಗಿ ಔಷಧಿ ಅಂಗಡಿಗಳಿಂದ ಔಷಧಿಗಳನ್ನು ಖರೀದಿಸಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಗಳ ಸಮಸ್ಯೆಗಳ ಕುರಿತು ಹಲವು ಬಾರಿ ಮನವಿ ಸಲ್ಲಿಸಿದರೂ ಶಾಶ್ವತ ಪರಿಹಾರ ಕಂಡುಬಂದಿಲ್ಲ ಎಂದು ಆರೋಪಿಸಿದ ಪವನ್ ಕುಮಾರ್ ಶಿರ್ವ, ಖಾಲಿ ಇರುವ ವೈದ್ಯರು ಹಾಗೂ ಸಿಬ್ಬಂದಿ ಹುದ್ದೆಗಳನ್ನು ತುರ್ತಾಗಿ ಭರ್ತಿ ಮಾಡಬೇಕು. ಆಸ್ಪತ್ರೆಗಳಿಗೆ ಅಗತ್ಯ ಮೂಲಸೌಕರ್ಯ, ಔಷಧಿಗಳ ನಿರಂತರ ಲಭ್ಯತೆ, ಸ್ವಚ್ಛತೆ ಹಾಗೂ ಆಡಳಿತ ವ್ಯವಸ್ಥೆಯನ್ನು ಬಲಪಡಿಸುವ ಮೂಲಕ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.


