ತಾಯಿಯ ಹೆಸರಿನಲ್ಲಿ ಗಿಡ ನೆಟ್ಟ ಕೇಂದ್ರ ಸಚಿವ ಸುರೇಶ್ ಗೋಪಿ: ಮಂಗಳೂರಿನಲ್ಲಿ ಸ್ವಚ್ಛತಾ ಪಖ್ವಾಡಾ-2026ಕ್ಕೆ ಚಾಲನೆ

ಮಂಗಳೂರು, ಜು. 6: ಪ್ರಧಾನಿ ನರೇಂದ್ರ ಮೋದಿ ಅವರ “ಏಕ್ ಪೇಡ್ ಮಾ ಕೆ ನಾಮ್” ಅಭಿಯಾನದ ಅಂಗವಾಗಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಹಾಗೂ ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಅವರು ತಮ್ಮ ತಾಯಿ ಶ್ರೀಮತಿ ವಿ. ಜ್ಞಾನಲಕ್ಷ್ಮಿ ಅಮ್ಮ ಅವರ ಹೆಸರಿನಲ್ಲಿ ಮಾವಿನ ಗಿಡ ನೆಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ಸೋಮವಾರ ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ವತಿಯಿಂದ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಆಶ್ರಯದಲ್ಲಿ ಆಯೋಜಿಸಿದ್ದ ಸ್ವಚ್ಛತಾ ಪಖ್ವಾಡಾ-2026 ಕಾರ್ಯಕ್ರಮವನ್ನು ಉದ್ಘಾಟಿಸಿದ ಸಚಿವರು, ಬಳಿಕ ಸ್ವತಃ ಪೊರಕೆ ಹಿಡಿದು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಿದರು.

ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸ್ವಚ್ಛತಾ ಪ್ರತಿಜ್ಞೆ ಬೋಧಿಸಿದ ಅವರು, ಕಸ ಎಸೆಯದಿರುವುದು, ಏಕಬಳಕೆಯ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದು ಹಾಗೂ ಮನೆ, ಕಚೇರಿ, ರಸ್ತೆ ಮತ್ತು ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡುವ ಸಂಕಲ್ಪ ಮಾಡುವಂತೆ ಕರೆ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಚಿವ ಸುರೇಶ್ ಗೋಪಿ, “ಸ್ವಚ್ಛತೆ ಎಂಬುದು ಕೇವಲ ಸರ್ಕಾರದ ಅಭಿಯಾನವಲ್ಲ; ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ, ಸಾಮಾಜಿಕ ಮೌಲ್ಯ ಮತ್ತು ಎಲ್ಲರ ಹಂಚಿಕೆಯ ಜವಾಬ್ದಾರಿಯಾಗಿದೆ” ಎಂದು ಹೇಳಿದರು.

ಮಹಾತ್ಮ ಗಾಂಧೀಜಿ ಕಂಡ ಸ್ವಚ್ಛ ಭಾರತದ ಕನಸನ್ನು ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಸ್ವಚ್ಛ ಭಾರತ ಮಿಷನ್ ಮೂಲಕ ಜನಾಂದೋಲನವಾಗಿ ರೂಪಿಸಿದರು. ಆರಂಭದಲ್ಲಿ ದೇಶವನ್ನು ಸ್ವಚ್ಛಗೊಳಿಸುವ ಗುರಿಯೊಂದಿಗೆ ಆರಂಭವಾದ ಈ ಯೋಜನೆ, ಇಂದು ಭಾರತವನ್ನು ವಿಶ್ವದ ಅತ್ಯಂತ ಸ್ವಚ್ಛ ರಾಷ್ಟ್ರವನ್ನಾಗಿ ರೂಪಿಸುವ ಮಹತ್ವಾಕಾಂಕ್ಷೆಯೊಂದಿಗೆ ಮುಂದುವರಿಯುತ್ತಿದೆ ಎಂದು ಅವರು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಫಲವಾಗಿ ವಿಶ್ವದ ಅನೇಕ ರಾಷ್ಟ್ರಗಳು ಕೂಡ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ಸಚಿವರು ಹೇಳಿದರು.

ಪ್ರಸ್ತುತ ನಡೆಯುತ್ತಿರುವ 15 ದಿನಗಳ ಸ್ವಚ್ಛತಾ ಪಖ್ವಾಡಾ ಅಭಿಯಾನದ ಅಂಗವಾಗಿ ದೇಶದ ವಿವಿಧ ರಾಜ್ಯಗಳಲ್ಲಿ ತಾವು ಸ್ವತಃ ಭಾಗವಹಿಸುತ್ತಿದ್ದು, ಕನಿಷ್ಠ 10 ರಾಜ್ಯಗಳಿಗೆ ಭೇಟಿ ನೀಡಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಉದ್ದೇಶ ಹೊಂದಿದ್ದೇನೆ. ಉಳಿದ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಚಿವಾಲಯದ ಇತರ ಪ್ರತಿನಿಧಿಗಳು ಅಭಿಯಾನವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ಶಾಸಕ ವೇದವ್ಯಾಸ್ ಕಾಮತ್, ಮಂಗಳೂರಿನ ರಾಮಕೃಷ್ಣ ಮಠದ ಅಧ್ಯಕ್ಷ ಶ್ರೀಮತ್ ಸ್ವಾಮಿ ಜಿತಕಾಮಾನಂದಜಿ ಮಹಾರಾಜ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!