ಮಂಗಳೂರು, ಜು. 7: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)’ (ವಿಬಿ-ಜಿ ರಾಮ್ ಜಿ) ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ಸಂಪೂರ್ಣ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ ಕಾರ್ಬಾರಿ ಸೂಚಿಸಿದರು.
ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲೆಯ ಅನುಷ್ಠಾನ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ವಿಬಿ-ಜಿ ರಾಮ್ ಜಿ ಸಿಬ್ಬಂದಿಗಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಯೋಜನೆಯ ಉದ್ದೇಶಗಳನ್ನು ಗ್ರಾಮೀಣ ಪ್ರದೇಶದ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಯೋಜನೆಯ ಯಶಸ್ಸಿಗೆ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಮಂಗಳೂರು ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಮಹೇಶ್ ಅಂಬೆಕಲ್ಲು, ಬಂಟ್ವಾಳ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ವಿಶ್ವನಾಥ್ ಬಿ., ಸುಳ್ಯ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ರವಿಚಂದ್ರ ಹಾಗೂ ಮೂಲ್ಕಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಅರುಣ್ ಪ್ರದೀಪ್ ಡಿಸೋಜಾ ಅವರು ಯೋಜನೆಯ ಅನುಷ್ಠಾನದ ವಿವಿಧ ಅಂಶಗಳ ಕುರಿತು ನಾಲ್ಕು ಅಧಿವೇಶನಗಳಲ್ಲಿ ತರಬೇತಿ ನೀಡಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಜಯಲಕ್ಷ್ಮಿ ರಾಯಕೊಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲೆಯ ಎಲ್ಲಾ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಂಬಂಧಿತ ಅಧಿಕಾರಿಗಳು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.


