ಬೀದಿಬದಿ ವ್ಯಾಪಾರಿಗಳ ಮೇಲಿನ ದಬ್ಬಾಳಿಕೆ ಸಂವಿಧಾನ ವಿರೋಧಿ: ಮುನೀರ್ ಕಾಟಿಪಳ್ಳ ಆಕ್ರೋಶ

ಮಂಗಳೂರು, ಜು. 10: ಬಡವರ ಜೀವನೋಪಾಯದ ಬಗ್ಗೆ ಕಾಳಜಿ ವಹಿಸದೆ ಬೀದಿಬದಿ ವ್ಯಾಪಾರಿಗಳ ಮೇಲೆ ದಬ್ಬಾಳಿಕೆ ನಡೆಸುತ್ತಿರುವುದು ಸಂವಿಧಾನ ವಿರೋಧಿ ಕೃತ್ಯ ಎಂದು ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಆರೋಪಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ನೇತೃತ್ವದಲ್ಲಿ ಸಂಡೆ ಬಜಾರ್ ವ್ಯಾಪಾರಕ್ಕೆ ಮುಕ್ತ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಆರಂಭಗೊಂಡ ಹಗಲು-ರಾತ್ರಿ ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯುರೋಪ್ ಮಾದರಿಯ ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳ ಬಗ್ಗೆ ಮಾತನಾಡುವ ಸರ್ಕಾರ, ಅಲ್ಲಿನಂತೆ ಜನರಿಗೆ ಶಿಕ್ಷಣ, ಆರೋಗ್ಯ, ವಸತಿ ಹಾಗೂ ಉದ್ಯೋಗ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ ಎಂದು ಅವರು ಟೀಕಿಸಿದರು. ಬಡ ವ್ಯಾಪಾರಿಗಳ ಬದುಕಿಗೆ ಧಕ್ಕೆ ತರುವ ಕ್ರಮಗಳನ್ನು ನಿಲ್ಲಿಸಿ, ಸಂಡೆ ಬಜಾರ್ ವ್ಯಾಪಾರ ಹಾಗೂ ಬಡ ಗ್ರಾಹಕರ ಹಿತಾಸಕ್ತಿಯನ್ನು ಮಹಾನಗರ ಪಾಲಿಕೆ ಗೌರವಿಸಬೇಕು ಎಂದು ಒತ್ತಾಯಿಸಿದರು.

ಸಂಡೆ ಬಜಾರ್ ವ್ಯಾಪಾರಿಗಳ ಮೇಲಿನ ದಬ್ಬಾಳಿಕೆ ಮುಂದುವರಿದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಕಾರ್ಯಕ್ರಮದಲ್ಲಿ ಸಿಐಟಿಯು ಜಿಲ್ಲಾ ಮುಖಂಡರಾದ ಜೆ. ಬಾಲಕೃಷ್ಣ ಶೆಟ್ಟಿ, ಜಯಂತಿ ಶೆಟ್ಟಿ, ಸುಕುಮಾರ್ ತೊಕ್ಕೊಟ್ಟು, ಸುನಿಲ್ ಕುಮಾರ್ ಬಜಾಲ್, ಬಿ.ಕೆ. ಇಮ್ತಿಯಾಜ್, ರಮೇಶ್ ಉಳ್ಳಾಲ್ ಸೇರಿದಂತೆ ಹಲವರು ಧರಣಿಗೆ ಬೆಂಬಲ ಸೂಚಿಸಿ ಮಾತನಾಡಿದರು. ಬೀದಿಬದಿ ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ವ್ಯಾಪಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!