ಉಡುಪಿ, ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಡಿಗೆ ಉರುಳಿದ ಪರಿಣಾಮ ಏಳು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಸರಳೆಬೆಟ್ಟು–ಕೊಡಂಗೆ ದೇವಸ್ಥಾನದ ಸಮೀಪ ನಡೆದಿದೆ.
ಮಣಿಪಾಲದ ಕ್ರೈಸ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಬಸ್ ಎಂದಿನಂತೆ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ, ಕೊಡಂಗೆ ದೇವಸ್ಥಾನದ ಸಮೀಪದ ಕಿರಿದಾದ ತಿರುವಿನಲ್ಲಿ ಚಾಲಕ ಬಸ್‌ನ್ನು ರಿವರ್ಸ್ ತೆಗೆದುಕೊಳ್ಳುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಡಿಗೆ ಉರುಳಿದೆ ಎಂದು ತಿಳಿದುಬಂದಿದೆ.


ಅಪಘಾತ ಸಂಭವಿಸಿದ ವೇಳೆ ಬಸ್‌ನಲ್ಲಿ ಸುಮಾರು 20 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಬಸ್ ತೋಡಿಗೆ ಉರುಳುತ್ತಿದ್ದಂತೆ ಮಕ್ಕಳು ಭಯಭೀತರಾಗಿ ಕಿರುಚಾಡಿದ್ದು, ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಹೊರತೆಗೆದರು.
ಘಟನೆಯಲ್ಲಿ ಏಳು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗಾಯಗೊಂಡ ಎಲ್ಲ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.
ಮಣಿಪಾಲ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಕ್ರೇನ್ ಸಹಾಯದಿಂದ ಬಸ್‌ನ್ನು ಮೇಲಕ್ಕೆತ್ತಲಾಗಿದ್ದು, ಚಾಲಕನ ನಿರ್ಲಕ್ಷ್ಯದ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.


