ಮಂಗಳೂರು:ಕರಾವಳಿ ಭಾಗದ ಯುವ ಸಮುದಾಯಕ್ಕೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ನಗರದ ಗಾಂಧಿನಗರದಲ್ಲಿರುವ ಶ್ರೀ ಗೋಕರ್ಣನಾಥೇಶ್ವರ ಕಾಲೇಜು ತನ್ನ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ಹಾಗೂ ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (KCCI), ಮಂಗಳೂರು ಸಹಯೋಗದಲ್ಲಿ ಜುಲೈ 16ರಂದು “ಸಮೃದ್ಧಿ CareerNxt-2026” ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದೆ ಎಂದು ಶ್ರೀ ಗೋಕರ್ಣನಾಥೇಶ್ವರ ಶಿಕ್ಷಣ ಸಂಸ್ಥೆಯ ಸಂಚಾಲಕ ನ್ಯಾಯವಾದಿ ವಸಂತ ಕಾರಂದೂರ್ ತಿಳಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿರುವ ಈ ಉದ್ಯೋಗ ಮೇಳದಲ್ಲಿ ರಾಜ್ಯದ 35ರಿಂದ 40ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ಅರ್ಹ ಅಭ್ಯರ್ಥಿಗಳನ್ನು ಸ್ಥಳದಲ್ಲೇ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಿವೆ ಎಂದು ತಿಳಿಸಿದರು.

ಕಾಯಂ ಉದ್ಯೋಗದ ಜೊತೆಗೆ ಪೂರ್ಣಾವಧಿ, ಅರೆಕಾಲಿಕ ಉದ್ಯೋಗ ಹಾಗೂ ಇಂಟರ್ನ್‌ಶಿಪ್ ಅವಕಾಶಗಳನ್ನೂ ಉದ್ಯೋಗಾಕಾಂಕ್ಷಿಗಳಿಗೆ ಒದಗಿಸಲಾಗುತ್ತಿದೆ. ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದಾಗಿದೆ. ವಿಶೇಷವಾಗಿ ವಾಣಿಜ್ಯ, ಕಲೆ ಹಾಗೂ ಮ್ಯಾನೇಜ್‌ಮೆಂಟ್ ವಿಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಲಭ್ಯವಿರಲಿವೆ ಎಂದರು.
ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಭಾಗದ ವಿವಿಧ ಜಿಲ್ಲೆಗಳಿಂದ ಸಾವಿರಾರು ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳು ಈ ಮೇಳದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

ಬ್ರಹ್ಮಶ್ರೀ ನಾರಾಯಣ ಗುರುಗಳ “ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಿಷ್ಠರಾಗಿ” ಎಂಬ ಸಂದೇಶವನ್ನು ಆಧಾರವಾಗಿಟ್ಟುಕೊಂಡು ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಸಮಾಜದ ಯಾವುದೇ ವಿದ್ಯಾರ್ಥಿ ಬಡತನದ ಕಾರಣದಿಂದ ಶಿಕ್ಷಣದಿಂದ ವಂಚಿತನಾಗಬಾರದು ಎಂಬ ದೃಷ್ಟಿಕೋನದಿಂದ 1982ರಲ್ಲಿ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಶಿಕ್ಷಣ ಸಂಸ್ಥೆಯನ್ನು ಆರಂಭಿಸಲಾಗಿತ್ತು. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ನೋಂದಣಿ ಶುಲ್ಕ ಇರುವುದಿಲ್ಲ. ಅರ್ಹ ಅಭ್ಯರ್ಥಿಗಳು ಕಾಲೇಜು ನೀಡಿರುವ ಕ್ಯೂಆರ್ ಕೋಡ್ ಮೂಲಕ ಉಚಿತವಾಗಿ ನೋಂದಾಯಿಸಿಕೊಳ್ಳಬಹುದಾಗಿದೆ. ಸಂದರ್ಶನಕ್ಕೆ ಹಾಜರಾಗುವವರು ತಮ್ಮ ನವೀಕೃತ ರೆಸ್ಯೂಮ್ ಹಾಗೂ ಅಗತ್ಯ ಶೈಕ್ಷಣಿಕ ದಾಖಲೆಗಳ ಪ್ರತಿಗಳೊಂದಿಗೆ ಬರಬೇಕು ಎಂದು ಮನವಿ ಮಾಡಿದರು.
ಹೆಚ್ಚಿನ ಮಾಹಿತಿಗಾಗಿ 99009 03802 ಹಾಗೂ 78290 47600 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಶ್ರೀ ಗೋಕರ್ಣನಾಥೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ನಾಗೇಶ್ ಕರ್ಕೇರ, ಕಾಲೇಜಿನ ಪ್ರಾಂಶುಪಾಲ ಡಾ. ಜಯಪ್ರಕಾಶ್ ಹಾಗೂ ಸಂಸ್ಥೆಯ ಸದಸ್ಯ ಮಿಥುನ್ ಚಂದ್ರ ಉಪಸ್ಥಿತರಿದ್ದರು.


