ಮಂಗಳೂರು, ಜುಲೈ 14: ಮಂಗಳೂರು ನಗರ ಹಾಗೂ ಉಡುಪಿ ಜಿಲ್ಲೆಯಲ್ಲಿ ದಾಖಲಾಗಿರುವ ಒಟ್ಟು 23 ಪ್ರಕರಣಗಳಲ್ಲಿ ಆರೋಪಿಯಾಗಿದ್ದ, ಹಲವು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದರೂ ಪೊಲೀಸರಿಂದ ತಪ್ಪಿಸಿಕೊಳ್ಳಲು ಬುರ್ಖಾ ಧರಿಸಿ ತಲೆಮರೆಸಿಕೊಂಡು ಓಡಾಡುತ್ತಿದ್ದ ಇಮ್ರಾನ್ ಅಲಿಯಾಸ್ ‘ಸುರ್ಮೋ’ ಇಮ್ರಾನ್ನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳವು ಸೇರಿದಂತೆ ಹಲವು ಅಪರಾಧ ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.

ಬಂಧಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಉದ್ದೇಶದಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

