ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್, ಉರ್ವ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿ ವಲಸಿಗರು ಪತ್ತೆಯಾದ ಹಿನ್ನೆಲೆಯಲ್ಲಿ, ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ವ್ಯಾಪಕ ತಪಾಸಣೆ ಮತ್ತು ಕಾರ್ಯಾಚರಣೆ ನಡೆಸುವಂತೆ ಆದೇಶಿಸಿರುವ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರ ಕ್ರಮವನ್ನು ವಿಶ್ವ ಹಿಂದೂ ಪರಿಷತ್ (ವಿಹಿಂಪ) ಸ್ವಾಗತಿಸಿದೆ.

ಈ ಕುರಿತು ಪ್ರಕಟಣೆ ನೀಡಿರುವ ವಿಹಿಂಪ ಕರ್ನಾಟಕ ದಕ್ಷಿಣ ಪ್ರಾಂತ ಸಹಕಾರ್ಯದರ್ಶಿ ಶರಣ್ ಕುಮಾರ್ ಪಂಪುವೆಲ್, ಕರಾವಳಿ ಭಾಗದಲ್ಲಿ ಅಕ್ರಮವಾಗಿ ಬಾಂಗ್ಲಾದೇಶಿ ಪ್ರಜೆಗಳು ನುಸುಳಿ ನೆಲೆಸಿರುವುದು ರಾಷ್ಟ್ರೀಯ ಭದ್ರತೆ ಹಾಗೂ ಸ್ಥಳೀಯರ ಹಿತಾಸಕ್ತಿಗೆ ಧಕ್ಕೆ ತರುವ ಗಂಭೀರ ವಿಚಾರವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕೈಗೊಂಡಿರುವ ತನಿಖೆ ಹಾಗೂ ಮುಂಜಾಗ್ರತಾ ಕ್ರಮಗಳು ಶ್ಲಾಘನೀಯವಾಗಿವೆ ಎಂದು ತಿಳಿಸಿದ್ದಾರೆ.

ಅಕ್ರಮ ನುಸುಳುಕೋರರ ಜಾಲವು ಮಂಗಳೂರು ನಗರಕ್ಕೆ ಮಾತ್ರ ಸೀಮಿತವಾಗಿರದೆ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಸೇರಿದಂತೆ ಇಡೀ ಕರಾವಳಿ ಭಾಗದಲ್ಲಿ ಹರಡಿರುವ ಸಾಧ್ಯತೆ ಇದೆ. ಆದ್ದರಿಂದ ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರು (ಐಜಿಪಿ) ಮಧ್ಯಪ್ರವೇಶಿಸಿ, ಕರಾವಳಿಯ ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲೂ ಇದೇ ಮಾದರಿಯ ಕಟ್ಟುನಿಟ್ಟಿನ ತಪಾಸಣೆ ಹಾಗೂ ವಿಶೇಷ ಕಾರ್ಯಾಚರಣೆ ನಡೆಸುವಂತೆ ಆದೇಶಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸಾರ್ವಜನಿಕರು ತಮ್ಮ ಸುತ್ತಮುತ್ತಲಿನಲ್ಲಿ ಅನುಮಾನಾಸ್ಪದವಾಗಿ ವಾಸ್ತವ್ಯ ಹೂಡಿರುವ ವ್ಯಕ್ತಿಗಳ ಬಗ್ಗೆ ತಕ್ಷಣವೇ ಸಂಬಂಧಪಟ್ಟ ಪೊಲೀಸ್ ಠಾಣೆ ಅಥವಾ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂಬ ಪೊಲೀಸ್ ಇಲಾಖೆಯ ಮನವಿಗೆ ವಿಹಿಂಪ ಬೆಂಬಲ ವ್ಯಕ್ತಪಡಿಸಿದೆ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ, ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆಹಚ್ಚುವ ಕಾರ್ಯದಲ್ಲಿ ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ನೀಡಲು ವಿಶ್ವ ಹಿಂದೂ ಪರಿಷತ್ ಸದಾ ಸಿದ್ಧವಿದೆ ಎಂದು ಶರಣ್ ಕುಮಾರ್ ಪಂಪುವೆಲ್ ತಿಳಿಸಿದ್ದಾರೆ.


