ಕಾಸರಗೋಡು, ಜು.15: ಕೊಪ್ಪಳ ಜಿಲ್ಲೆಯ ಶ್ರೇಷ್ಠ ಸಾಹಿತಿಗಳಾದ ಶ್ರೀ ಮಹೇಶ್ ಮನ್ನಾಪುರ ಹಾಗೂ ಶ್ರೀಮತಿ ಅನ್ನಪೂರ್ಣ ಮಹೇಶ್ ಮನ್ನಾಪುರ ದಂಪತಿಗಳಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026’ ಘೋಷಿಸಲಾಗಿದೆ.

ಕಾಸರಗೋಡಿನ ಕನ್ನಡ ಭವನದ ರಜತ ಸಂಭ್ರಮ ಸಮಾರೋಪದ ಅಂಗವಾಗಿ ಜುಲೈ 26ರಂದು ನಡೆಯಲಿರುವ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಅವರು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆ, ಕನ್ನಡ ಭಾಷೆ ಹಾಗೂ ಸಂಸ್ಕೃತಿಯ ಬೆಳವಣಿಗೆಗೆ ನೀಡಿರುವ ಮಹತ್ವದ ಕೊಡುಗೆಯನ್ನು ಪರಿಗಣಿಸಿ ಈ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಗೆ ಮಹೇಶ್ ಮನ್ನಾಪುರ–ಅನ್ನಪೂರ್ಣ ದಂಪತಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.
ಜುಲೈ 26ರಂದು ನಡೆಯಲಿರುವ ಸಮ್ಮೇಳನದಲ್ಲಿ ರಾಜ್ಯ ಹಾಗೂ ಹೊರರಾಜ್ಯಗಳಿಂದ ಆಗಮಿಸುವ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ವಿವಿಧ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಸಮ್ಮಾನ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ.

