ಅಧಿವೇಶನದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವರದಿ ಮಂಡನೆಗೆ ಆಗ್ರಹ

ಉಡುಪಿ: ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಿ, ಅದರ ಕುರಿತು ವಿಶೇಷ ಚರ್ಚೆಗೆ ಅವಕಾಶ ಕಲ್ಪಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್ ಒತ್ತಾಯಿಸಿದರು.
ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಮುನ್ನ ದಿನ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಅವರಿಂದ ವರದಿ ಸ್ವೀಕರಿಸಲಾಗಿದ್ದರೂ, ಹೊಸದಾಗಿ ಅಧಿಕಾರಕ್ಕೆ ಬಂದಿರುವ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಈ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.


ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಹಿತಾಸಕ್ತಿಯನ್ನು ಕಾಂಗ್ರೆಸ್ ಸರ್ಕಾರ ನಿರ್ಲಕ್ಷಿಸಿದೆ. ಹಿಂದುಳಿದ ವರ್ಗಗಳನ್ನು ರಾಜಕೀಯವಾಗಿ ಮೂಲೆಗುಂಪು ಮಾಡುವ ಪ್ರಯತ್ನ ನಡೆಯುತ್ತಿದೆ. ನೂರಾರು ಕೋಟಿ ರೂಪಾಯಿ ಸಾರ್ವಜನಿಕ ಹಣ ವೆಚ್ಚ ಮಾಡಿ ಸಿದ್ಧಪಡಿಸಿರುವ ವರದಿಯನ್ನು ಸರ್ಕಾರ ಸಾರ್ವಜನಿಕರ ಮುಂದಿಡದೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಟೀಕಿಸಿದರು.


ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ಸಮಗ್ರ ಚರ್ಚೆಯಾಗಬೇಕಿದ್ದು, ಇದನ್ನು ಕೇವಲ ‘ಜಾತಿ ಗಣತಿ’ಗೆ ಸೀಮಿತಗೊಳಿಸುವುದು ಸರಿಯಲ್ಲ ಎಂದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜನಗಣತಿಯೊಂದಿಗೆ ಜಾತಿ ಗಣತಿಯನ್ನೂ ನಡೆಸಲು ಮುಂದಾಗಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ತನ್ನ ಆರ್ಥಿಕ ಹಾಗೂ ಸಾಮಾಜಿಕ ಸಮೀಕ್ಷೆಯ ಸಂಪೂರ್ಣ ವಿವರಗಳನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ಹೋರಾಟಗಾರ ಸೋನಮ್ ವಾಂಗ್‌ಚುಕ್ ನಡೆಸುತ್ತಿರುವ ಪ್ರತಿಭಟನೆಯ ಹಿಂದೆ ‘ಜಿರಳೆ ಪಕ್ಷ’ (ವಿಪಕ್ಷ) ಗಳ ಪಿತೂರಿ ಇದ್ದು, ಕೆಲವರು ಅವರ ತಲೆಕೆಡಿಸಿ, ಅವರ ಹೋರಾಟವನ್ನು ‘ಆಝಾದಿ’, ‘ಕಾಶ್ಮೀರ’ದಂತಹ ದೇಶವಿರೋಧಿ ಘೋಷಣೆಗಳ ಹಾದಿಗೆ ತಿರುಗಿಸಲು ಯತ್ನಿಸುತ್ತಿವೆ. ತತ್‌ಕ್ಷಣವೇ ಪ್ರತಿಭಟನೆ ಹಿಂದಕ್ಕೆ ಪಡೆಯಲಿ ಎಂದರು.


ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಪ್ರವೀಣ್ ಕುಮಾರ್ ಗುರ್ಮೆ, ಶಶಾಂಕ್ ಶಿವತ್ತಾಯ, ಶ್ರೀನಿಧಿ ಹೆಗ್ಡೆ ಹಾಗೂ ದಿನಕರ ಶೆಟ್ಟಿ ಹೆರ್ಗ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!