ಮುರ್ಷಿದಾಬಾದ್, :ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಐದಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.ಬೆಳಿಗ್ಗೆ ಸುಮಾರು 7 ಗಂಟೆಗೆ ಬರ್ಹಾಂಪೋರ್ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ಣಸುಬರ್ಣ ಹಾಗೂ ಗೋಬಿಂದಾಪುರ ರೈಲು ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ನಲ್ಲಿ ಈ ದುರ್ಘಟನೆ ನಡೆದಿದೆ.

ನಿಮ್ಟಿತಾ–ಕಟ್ವಾ ಮಾರ್ಗದಲ್ಲಿ ಸಂಚರಿಸುತ್ತಿದ್ದ ಪ್ಯಾಸೆಂಜರ್ ರೈಲು, ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವ್ಯಾನ್ ಹಾಗೂ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಶಾಲಾ ವ್ಯಾನ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೂವರು ವಿದ್ಯಾರ್ಥಿಗಳು ಮತ್ತು ಮತ್ತೋರ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಪ್ರತ್ಯಕ್ಷದರ್ಶಿಗಳ ಪ್ರಕಾರ, ರೈಲು ಸಮೀಪಿಸುತ್ತಿದ್ದರೂ ಲೆವೆಲ್ ಕ್ರಾಸಿಂಗ್ ಗೇಟ್ ತೆರೆದಿದ್ದರಿಂದ ಶಾಲಾ ವ್ಯಾನ್ ಮತ್ತು ಸೈಕಲ್ ಸವಾರ ಹಳಿ ದಾಟಲು ಮುಂದಾಗಿದ್ದರು. ಇದೇ ವೇಳೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಸ್ಥಳೀಯರು ಹಾಗೂ ಪೊಲೀಸರು ರಕ್ಷಿಸಿ ಕರ್ಣಸುಬರ್ಣ ಬ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಘಟನೆಯ ಕುರಿತು ಸಮಗ್ರ ತನಿಖೆ ನಡೆಸಲು 10 ಸದಸ್ಯರ ವಿಶೇಷ ತಂಡವನ್ನು ಸ್ಥಳಕ್ಕೆ ರವಾನಿಸಲಾಗಿದೆ. ರೈಲು ಸಮೀಪಿಸುತ್ತಿದ್ದ ಸಂದರ್ಭದಲ್ಲಿ ಲೆವೆಲ್ ಕ್ರಾಸಿಂಗ್ ಗೇಟ್ ಏಕೆ ತೆರೆದಿತ್ತು ಎಂಬುದರ ಬಗ್ಗೆ ತನಿಖೆ ನಡೆಯಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ಘೋಷಿಸಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.



