ಲಾವಣ್ಯ ಹತ್ಯೆ ಪ್ರಕರಣ: ಆರೋಪಿಗೆ ಜಾಮೀನು ನೀಡದೆ ಕಠಿಣ ಶಿಕ್ಷೆ ವಿಧಿಸಬೇಕು – ಕಾಂಗ್ರೆಸ್ ಮುಖಂಡೆ ಎಸ್. ಅಪ್ಪಿ

ಮಂಗಳೂರು:ಬಿ.ಸಿ.ರೋಡ್‌ನಲ್ಲಿ ನಡೆದ ಯುವತಿ ಲಾವಣ್ಯ ಹತ್ಯೆ ಪ್ರಕರಣದ ಆರೋಪಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ನಗರ ಅಧ್ಯಕ್ಷರಾದ ಎಸ್ ಅಪ್ಪಿ ಆಗ್ರಹಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರ ಮೇಲಿನ ನಿರಂತರ ಹಿಂಸಾಚಾರ ಮತ್ತು ದೌರ್ಜನ್ಯ ಪ್ರಕರಣಗಳು ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿವೆ. ಲಾವಣ್ಯ ಹತ್ಯೆ ಪ್ರಕರಣ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದ್ದು, ಮಹಿಳೆಯರು ಹಾಗೂ ಪೋಷಕರಲ್ಲಿ ತೀವ್ರ ಆತಂಕ ಉಂಟುಮಾಡಿದೆ ಎಂದು ಹೇಳಿದರು.

ಅಪರಾಧ ಪ್ರಕರಣಗಳ ತ್ವರಿತ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿದಾಗ ಮಾತ್ರ ಸಮಾಜಕ್ಕೆ ಸ್ಪಷ್ಟ ಸಂದೇಶ ರವಾನೆಯಾಗಲಿದೆ. ಇಂತಹ ಘಟನೆಗಳು ಮರುಕಳಿಸದಂತೆ ಕಾನೂನು ಸುವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮತ್ತು ಸರ್ಕಾರದ ಮೇಲಿದೆ ಎಂದು ಅವರು ಹೇಳಿದರು.

ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಸಮರ್ಪಕ ಬೆಳಕಿನ ವ್ಯವಸ್ಥೆ ಇಲ್ಲದಿರುವುದು ಹಾಗೂ ರಾತ್ರಿ ವೇಳೆ ಭದ್ರತಾ ಕೊರತೆ ಇರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಬಸ್ ನಿಲ್ದಾಣದಲ್ಲಿ ತಕ್ಷಣವೇ ಸಮರ್ಪಕ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು. ಅಲ್ಲದೆ ಎಲ್ಲ ಬಸ್ ನಿಲ್ದಾಣಗಳಲ್ಲೂ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಭದ್ರತೆಯನ್ನು ಬಲಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ಅಪರಾಧ ನಡೆಯುವ ಸಂದರ್ಭಗಳಲ್ಲಿ ಸಾರ್ವಜನಿಕರು ಕೇವಲ ಮೊಬೈಲ್‌ನಲ್ಲಿ ವಿಡಿಯೊ ಚಿತ್ರೀಕರಿಸುವ ಬದಲು, ಸಾಧ್ಯವಾದ ಮಟ್ಟಿಗೆ ಜೀವ ರಕ್ಷಣೆ ಹಾಗೂ ಪೊಲೀಸರಿಗೆ ತಕ್ಷಣ ಮಾಹಿತಿ ನೀಡುವ ಸಾಮಾಜಿಕ ಜವಾಬ್ದಾರಿಯನ್ನು ಪ್ರದರ್ಶಿಸಬೇಕು ಎಂದರು.

ಲಾವಣ್ಯ ಕೇವಲ ಮೂರು ತಿಂಗಳ ಹಿಂದೆ ಉದ್ಯೋಗಕ್ಕೆ ಸೇರಿದ್ದ ಯುವತಿಯಾಗಿದ್ದು, ಆಕೆಯ ಸಾವಿನಿಂದ ಕುಟುಂಬಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಈ ಪ್ರಕರಣದಲ್ಲಿ ಆರೋಪಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು. ತನಿಖೆಯನ್ನು ಪಾರದರ್ಶಕವಾಗಿ ನಡೆಸಿ, ನ್ಯಾಯಾಲಯದಲ್ಲಿ ಬಲವಾದ ಸಾಕ್ಷ್ಯಾಧಾರಗಳೊಂದಿಗೆ ದೋಷಾರೋಪಣೆ ಸಾಬೀತುಪಡಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಲಾವಣ್ಯ ಕುಟುಂಬಕ್ಕೆ ಸರ್ಕಾರದಿಂದ ದೊರೆಯಬೇಕಾದ ಪರಿಹಾರವನ್ನು ಶೀಘ್ರವಾಗಿ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೂ ಸಹ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ ಎಂದು ಎಸ್. ಅಪ್ಪಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಸ್ವರೂಪಾ ಎನ್. ಶೆಟ್ಟಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯರಾದ ವೃಂದಾ ಪೂಜಾರಿ ಹಾಗೂ ಚಂದ್ರಕಲಾ ಜೋಗಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳಾದ ವೀಣಾ ಬೆನೆಡಿಕ್ಟ್, ಶಾಂತಲಾ ಗಟ್ಟಿ, ಗೀತಾ ಪ್ರವೀಣ್, ಚಂಚಲಾಕ್ಷಿ, ಅಸ್ಮಾ, ರೀಟಾ ಡಿ’ಸೋಜಾ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!