ಮಂಗಳೂರು ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ-ಪ್ರಸಿದ್ಧ ರೌಡಿಶೀಟರ್ ಗೆ ಗಂಭೀರ ಗಾಯ

ಮಂಗಳೂರು: ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ದಾಳಿಗೊಳಗಾದ ವ್ಯಕ್ತಿಯನ್ನು ವಿಖ್ಯಾತ್ ಅಲಿಯಾಸ್ ವಿಕ್ಕಿ ಬಪ್ಪಾಲ್ (32) ಎಂದು ಗುರುತಿಸಲಾಗಿದೆ.

ಮಧ್ಯಾಹ್ನ ಸುಮಾರು 1:45ರ ವೇಳೆಗೆ ವಿಕ್ಕಿ ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ, ಅಪರಿಚಿತ ಹಂತಕನೊಬ್ಬ ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಏಕಾಏಕಿ ಮಚ್ಚಿನಿಂದ ಭೀಕರವಾಗಿ ದಾಳಿ ನಡೆಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ದಾಳಿಯ ರಭಸಕ್ಕೆ ಕುತ್ತಿಗೆ ಭಾಗಕ್ಕೆ ಆಳವಾದ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಆತನನ್ನು ತಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಗಾಯಾಳು ವಿಕ್ಕಿ ಮಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದು, ಗಾಂಜಾ ದಂಧೆಯಲ್ಲೂ ತೊಡಗಿಸಿಕೊಂಡಿದ್ದ ಎನ್ನಲಾಗಿದೆ.

ಘಟನೆ ನಡೆದ ತಕ್ಷಣವೇ ಎಚ್ಚೆತ್ತುಕೊಂಡಿರುವ ನಗರ ಪೊಲೀಸರು ಇಡೀ ಮಂಗಳೂರಿನಾದ್ಯಂತ ತಪಾಸಣೆಯನ್ನು ತೀವ್ರಗೊಳಿಸಿದ್ದು, ಪ್ರಮುಖ ರಸ್ತೆ ಹಾಗೂ ಗಡಿ ಭಾಗದ ಎಲ್ಲಾ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಯ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚಿಸಿ ಬಲೆ ಬೀಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಬರ್ಕೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗುತ್ತಿದ್ದು, ಪೂರ್ವ ವಿಭಾಗದ ಪೊಲೀಸ್ ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ತೀವ್ರ ತನಿಖೆ ಮುಂದುವರಿದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!