ಮಂಗಳೂರು, ಜು. 29: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನೀಡಿರುವುದಾಗಿ ಆರೋಪಿಸಲಾಗಿರುವ ಅವಹೇಳನಕಾರಿ ಹಾಗೂ ಬೆದರಿಕೆ ಸ್ವರೂಪದ ಹೇಳಿಕೆಯನ್ನು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ತೀವ್ರವಾಗಿ ಖಂಡಿಸಿದ್ದಾರೆ. ಯಶ್‌ಪಾಲ್ ಸುವರ್ಣ ವಿರುದ್ಧ ತಕ್ಷಣವೇ ಕ್ರಿಮಿನಲ್ ಪ್ರಕರಣ ದಾಖಲಿಸಿ, ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಬುಧವಾರ ಪ್ರಕಟಣೆ ನೀಡಿರುವ ಐವನ್ ಡಿ’ಸೋಜಾ, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ವಿರುದ್ಧ ರಾಹುಲ್ ಗಾಂಧಿ ದೇಶಾದ್ಯಂತ ನಿರಂತರ ಹೋರಾಟ ನಡೆಸಿದ್ದು, ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯನ್ನು ರಾಷ್ಟ್ರದ ಮುಂದಿಟ್ಟಿದ್ದಾರೆ ಎಂದು ಹೇಳಿದ್ದಾರೆ.
ನೀಟ್ ಪರೀಕ್ಷೆಗೆ ಸಂಬಂಧಿಸಿದ ಅಕ್ರಮಗಳ ವಿರುದ್ಧ ರಾಹುಲ್ ಗಾಂಧಿ ನಡೆಸಿದ ಹೋರಾಟದ ಪರಿಣಾಮವಾಗಿ ಕೇಂದ್ರ ಸರ್ಕಾರ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತಿದ ರಾಷ್ಟ್ರೀಯ ನಾಯಕರ ವಿರುದ್ಧ ವೈಯಕ್ತಿಕ ದ್ವೇಷದ ಭಾಷೆ ಬಳಸುವುದು ಹಾಗೂ ಅವಹೇಳನಕಾರಿ ಹೇಳಿಕೆ ನೀಡುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.

“ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡಿದ ನೀಟ್ ಹಗರಣದ ವಿರುದ್ಧ ಧ್ವನಿ ಎತ್ತಿದವರನ್ನೇ ಗುರಿಯಾಗಿಸಿಕೊಂಡು ದ್ವೇಷದ ರಾಜಕಾರಣ ಮಾಡುವುದು ಅತ್ಯಂತ ಖಂಡನೀಯ. ಇಂತಹ ಹೇಳಿಕೆಗಳು ಸಮಾಜದಲ್ಲಿ ಅಶಾಂತಿ ಮತ್ತು ವೈಮನಸ್ಸು ಸೃಷ್ಟಿಸುವ ಪ್ರಯತ್ನವಾಗಿದ್ದು, ಜನಪ್ರತಿನಿಧಿಯೊಬ್ಬರಿಗೆ ಶೋಭೆ ತರುವುದಿಲ್ಲ,” ಎಂದು ಐವನ್ ಡಿ’ಸೋಜಾ ಹೇಳಿದ್ದಾರೆ.
ಯಶ್‌ಪಾಲ್ ಸುವರ್ಣ ಅವರ ಹೇಳಿಕೆಗಳು ದ್ವೇಷಪೂರಿತ ಹಾಗೂ ಪ್ರಚೋದನಕಾರಿ ಸ್ವರೂಪದ್ದಾಗಿದ್ದು, ರಾಜ್ಯದ ಶಾಂತಿ, ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ. ಆದ್ದರಿಂದ ಅವರ ವಿರುದ್ಧ ತಕ್ಷಣವೇ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ರಾಹುಲ್ ಗಾಂಧಿ ಅವರು ನೀಟ್ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಹಾಗೂ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ನಡೆಸಿದ ಹೋರಾಟದ ಫಲವಾಗಿ ಕೇಂದ್ರ ಸರ್ಕಾರ ಅಗತ್ಯ ಬದಲಾವಣೆಗಳನ್ನು ಕೈಗೊಳ್ಳುವಂತಾಗಿದೆ. ಇಂತಹ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವುದು ಸಮಾಜಕ್ಕೆ ತಪ್ಪು ಸಂದೇಶ ರವಾನಿಸುತ್ತದೆ ಎಂದು ಐವನ್ ಡಿ’ಸೋಜಾ ಅಭಿಪ್ರಾಯಪಟ್ಟಿದ್ದಾರೆ.
ಈ ವಿಷಯವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ, ಜನಪ್ರತಿನಿಧಿಗಳು ಸಾರ್ವಜನಿಕ ಜೀವನದ ಘನತೆಗೆ ತಕ್ಕಂತೆ ನಡೆದುಕೊಳ್ಳುವಂತೆ ವಿಧಾನಸಭೆಯ ಸಭಾಧ್ಯಕ್ಷರು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವು ಪ್ರತಿಭಟನೆ ನಡೆಸುವುದರ ಜೊತೆಗೆ ವಿಧಾನಸಭೆಯ ಸಭಾಧ್ಯಕ್ಷರಿಗೆ ದೂರು ಸಲ್ಲಿಸಿ ಕಾನೂನು ಕ್ರಮಕ್ಕೆ ಆಗ್ರಹಿಸಲಿದೆ ಎಂದು ಐವನ್ ಡಿ’ಸೋಜಾ ತಿಳಿಸಿದ್ದಾರೆ.

