ಬಳ್ಳಾರಿ, ಜು.31: ಕೌಟುಂಬಿಕ ಕಲಹದ ಹಿನ್ನೆಲೆ ಬಳ್ಳಾರಿಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಪತಿಯೇ ಪತ್ನಿ ಹಾಗೂ ಏಳು ತಿಂಗಳ ಹೆಣ್ಣು ಮಗುವನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಅಂದ್ರಾಳ್ ಪ್ರದೇಶದಲ್ಲಿ ನಡೆದಿದೆ.

ಮೃತರನ್ನು ರಾಜೇಶ್ವರಿ (26) ಹಾಗೂ ಅವರ ಏಳು ತಿಂಗಳ ಹೆಣ್ಣು ಮಗು ಎಂದು ಗುರುತಿಸಲಾಗಿದೆ.

ರಾಜೇಶ್ವರಿ ಅವರ ಪತಿ ಹೊನ್ನೂರುಸ್ವಾಮಿ ಈ ಕೃತ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಕೌಟುಂಬಿಕ ಕಲಹವೇ ಈ ದ್ವಿಹತ್ಯೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಎಪಿಎಂಸಿ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆ ಹಾಗೂ ಘಟನೆಯ ನಿಖರ ಕಾರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.


