ಮಂಗಳೂರು: ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತರಲಾದ ಬಳಿಕ ಮೃತಪಟ್ಟ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ ನಾಪತ್ತೆಯಾಗಿದೆ ಎಂದು ಆರೋಪಿಸಿ ಪತಿಯೊಬ್ಬರು ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ.


ಮಂಗಳೂರು ಪದವು ಶಕ್ತಿನಗರದ ನಿವಾಸಿ ಸುಂದರ ಪೂಜಾರಿ (72) ಅವರ ಪತ್ನಿ ಜಾನಕಿ (53) ಅವರಿಗೆ ಜುಲೈ 26ರಂದು ಬೆಳಿಗ್ಗೆ ಸುಮಾರು 8 ಗಂಟೆಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಆಟೋ ರಿಕ್ಷಾದಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಹೃದ್ರೋಗ ತಜ್ಞರು ಲಭ್ಯವಿಲ್ಲದ ಕಾರಣ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ವೆನ್ಲಾಕ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ವೈದ್ಯರು ಪರೀಕ್ಷಿಸಿದ ಬಳಿಕ ಜಾನಕಿ ಮೃತಪಟ್ಟಿರುವುದಾಗಿ ತಿಳಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೂರಿನಲ್ಲಿರುವ ವಿವರದಂತೆ, ಆಸ್ಪತ್ರೆಗೆ ದಾಖಲಿಸುವ ವೇಳೆ ಜಾನಕಿ ಅವರ ಕುತ್ತಿಗೆಯಲ್ಲಿ ಸುಮಾರು 32 ಗ್ರಾಂ ತೂಕದ ಚಿನ್ನದ ಕರಿಮಣಿ ಸರ (ಅಂದಾಜು ಮೌಲ್ಯ ₹1.50 ಲಕ್ಷ) ಇತ್ತು ಎನ್ನಲಾಗಿದೆ. ಆದರೆ, ಮೃತದೇಹವನ್ನು ಬಳಿಕ ಪರಿಶೀಲಿಸಿದಾಗ ಆ ಸರ ಕಾಣಿಸದಿರುವುದು ಗಮನಕ್ಕೆ ಬಂದಿದೆ ಎಂದು ಪತಿ ಆರೋಪಿಸಿದ್ದಾರೆ.

