ಕಾವೇರಿ ವಿವಾದ: ಕಾನೂನು ಗೌರವಿಸಿ, ಹೋರಾಟ ಶಾಂತಿಯುತವಾಗಿರಲಿ – ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಮೈಸೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ನ್ಯಾಯಾಲಯದ ಆದೇಶವನ್ನು ಗೌರವಿಸುವುದರ ಜೊತೆಗೆ ಜನರ ಹಿತವನ್ನೂ ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳ ಹಿತವನ್ನು ಗಮನದಲ್ಲಿಟ್ಟುಕೊಂಡಿದೆ. ತಮಿಳುನಾಡಿಗೆ ನೀರು ಬಿಡುಗಡೆ ಸಂಬಂಧ ಅಂತಿಮ ನಿರ್ಧಾರವನ್ನು ಕಾನೂನು ತಜ್ಞರು, ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ನಾಯಕರೊಂದಿಗೆ ಚರ್ಚಿಸಿ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪ್ರಸ್ತುತ ಕಬಿನಿ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಅಣೆಕಟ್ಟು ಶೀಘ್ರದಲ್ಲೇ ಭರ್ತಿಯಾಗುವ ಹಂತದಲ್ಲಿದೆ. ಇಂತಹ ಸಂದರ್ಭದಲ್ಲಿ ನೀರನ್ನು ತಡೆಹಿಡಿಯುವುದು ಸಾಧ್ಯವಿಲ್ಲ. ಹೋರಾಟಗಾರರು ಜಲಾಶಯ ಅಥವಾ ನದಿಯಲ್ಲಿ ಇಳಿದು ನೀರು ತಡೆಯಲು ಯತ್ನಿಸಬಾರದು. ಅಂತಹ ಕ್ರಮಗಳು ಜೀವಕ್ಕೆ ಅಪಾಯ ಉಂಟುಮಾಡಬಹುದು ಎಂದು ಎಚ್ಚರಿಸಿದರು.

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಹೋರಾಟ ನಡೆಸುವುದು ಪ್ರತಿಯೊಬ್ಬರ ಪ್ರಜಾಪ್ರಭುತ್ವದ ಹಕ್ಕು. ಆದರೆ ಸಾರ್ವಜನಿಕರ ಆಸ್ತಿ-ಪಾಸ್ತಿ ಹಾಗೂ ಸಾಮಾನ್ಯ ಜನರ ಬದುಕಿಗೆ ತೊಂದರೆಯಾಗದ ರೀತಿಯಲ್ಲಿ ಪ್ರತಿಭಟನೆ ನಡೆಸಬೇಕು ಎಂದು ಮನವಿ ಮಾಡಿದರು.

ಮೇಕೆದಾಟು ಯೋಜನೆಯ ಅಗತ್ಯವನ್ನು ಕೇಂದ್ರ ಸರ್ಕಾರವೂ ಸಂಸತ್ತಿನಲ್ಲಿ ಸ್ಪಷ್ಟಪಡಿಸಿದ್ದು, ಯೋಜನೆಗೆ ಸಂಬಂಧಿಸಿದ ಕಾನೂನು ಚೌಕಟ್ಟಿನ ಬಗ್ಗೆ ಸಮರ್ಪಕ ಉತ್ತರ ನೀಡಿದೆ. ರಾಜ್ಯದ ಹಕ್ಕುಗಳನ್ನು ಕಾನೂನುಬದ್ಧವಾಗಿ ಪಡೆಯಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ತುಂಗಭದ್ರಾ ನದಿಯಲ್ಲಿ ಬ್ಯಾಲೆನ್ಸಿಂಗ್ ರಿಸರ್ವಾಯರ್ ನಿರ್ಮಾಣಕ್ಕೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಒಪ್ಪಿಗೆ ವ್ಯಕ್ತವಾಗಿದ್ದು, ಈ ಕುರಿತು ಸಮಿತಿ ರಚಿಸುವ ಪ್ರಕ್ರಿಯೆ ನಡೆಯುತ್ತಿದೆ. ಇದು ದೇಶಕ್ಕೆ ಮಾದರಿಯಾಗುವ ನಿರ್ಧಾರವಾಗಲಿದೆ ಎಂದು ತಿಳಿಸಿದರು.

ತಮಿಳುನಾಡು ಮುಖ್ಯಮಂತ್ರಿ ಅವರೊಂದಿಗೆ ಮಾತುಕತೆಗೆ ತಾವು ಸಿದ್ಧರಾಗಿದ್ದು, ಉಭಯ ರಾಜ್ಯಗಳ ನಡುವೆ ಸೌಹಾರ್ದಯುತ ಸಂವಾದದ ಮೂಲಕ ಸಮಸ್ಯೆ ಪರಿಷ್ಕಾರವಾಗಬೇಕು. ಕರ್ನಾಟಕದ ಹಕ್ಕನ್ನು ಕಾಪಾಡುವುದರ ಜೊತೆಗೆ ತಮಿಳುನಾಡಿನ ಕಾನೂನುಬದ್ಧ ಹಕ್ಕಿಗೂ ಸರ್ಕಾರ ಅಡ್ಡಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!