ರಾಹುಲ್ ಗಾಂಧಿ ವಿರುದ್ಧ ಯಶ್ಪಾಲ್ ಸುವರ್ಣ ಹೇಳಿಕೆ ಖಂಡಿಸಿ ದಕ್ಷಿಣ ಕನ್ನಡ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು, ಆ. 1: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಉಡುಪಿ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ನೀಡಿರುವ ಹೇಳಿಕೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಶನಿವಾರ ಮಂಗಳೂರು ಪುರಭವನ ಮುಂಭಾಗದ ರಾಜಾಜಿ ಪಾರ್ಕ್‌ನ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಿ. ರಮಾನಾಥ ರೈ, ಬಿಜೆಪಿ ದ್ವೇಷದ ರಾಜಕಾರಣ ಹಾಗೂ ಪ್ರಚೋದನಕಾರಿ ಭಾಷಣಗಳಿಗೆ ಉತ್ತೇಜನ ನೀಡುತ್ತಿದೆ ಎಂದು ಆರೋಪಿಸಿದರು. ಸಮಾಜದಲ್ಲಿ ಸಾಮರಸ್ಯ ಹಾಳು ಮಾಡುವ ರೀತಿಯ ಹೇಳಿಕೆಗಳನ್ನು ನೀಡುವವರಿಗೆ ಬಿಜೆಪಿ ಪ್ರೋತ್ಸಾಹ ನೀಡುತ್ತಿದೆ ಎಂದು ಟೀಕಿಸಿದರು.

ರಾಹುಲ್ ಗಾಂಧಿ ಅವರ ಕುಟುಂಬ ದೇಶಕ್ಕಾಗಿ ಅಪಾರ ತ್ಯಾಗ ಮಾಡಿರುವ ಕುಟುಂಬವಾಗಿದ್ದು, ಅಂತಹ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದರು.

ಯಶ್ಪಾಲ್ ಸುವರ್ಣ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಶಾಸಕ ಸ್ಥಾನದಿಂದ ಅನರ್ಹಗೊಳಿಸುವ ಕುರಿತು ಸಂಬಂಧಿತ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಅವರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಹರೀಶ್ ಕುಮಾರ್, ಜೆ.ಆರ್. ಲೋಬೊ, ಪದ್ಮರಾಜ್ ಪೂಜಾರಿ, ಸುಹಾನ್ ಆಳ್ವ, ಶುಭೋದಯ ಆಳ್ವ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರು ಭಾಗವಹಿಸಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!