ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟವು ಸೋಮವಾರ ಸಂಜೆ ವಿಸ್ತರಣೆಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ 20 ನೂತನ ಸಚಿವರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಪಟ್ಟಿ ಪ್ರಕಟವಾಗುತ್ತಿದ್ದಂತೆಯೇ ಸಚಿವ ಸ್ಥಾನದಿಂದ ವಂಚಿತರಾದ ಕೆಲವು ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನ ಭುಗಿಲೆದ್ದಿದೆ.

ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರಿಗೆ ಕೊನೆ ಕ್ಷಣದಲ್ಲಿ ಅವಕಾಶ ಕೈತಪ್ಪಿದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಳೆ ಶಾಸಕ ಸ್ಥಾನ ಹಾಗೂ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದು, ಕಾಂಗ್ರೆಸ್ ಹೈಕಮಾಂಡ್ನ ನಿರ್ಧಾರಕ್ಕೆ ಪರೋಕ್ಷ ಅಸಮಾಧಾನ ಹೊರಹಾಕಿದ್ದಾರೆ.

ಈ ಹಿಂದೆ ಸಚಿವ ಸ್ಥಾನಕ್ಕಾಗಿ ಯಶವಂತರಾಯಗೌಡ ಪಾಟೀಲ್ ಅವರ ಬೆಂಬಲಿಗರು ಬೆಂಗಳೂರಿನ ಸಿಎಂ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದರು. ವಿಜಯಪುರ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದ ಅವರು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರ ವಿರೋಧದಿಂದ ಯಶವಂತರಾಯಗೌಡ ಪಾಟೀಲ್ ಅವರಿಗೆ ಅವಕಾಶ ಕೈತಪ್ಪಿದೆ ಎಂದು ಆರೋಪಿಸಿದ್ದರು.


