ಮಂಗಳೂರು : ಮಂಗಳೂರು–ಸೋಲಾಪುರ ರಾಷ್ಟ್ರೀಯ ಹೆದ್ದಾರಿಯ (NH-169) ವಾಮಂಜೂರು–ಕೆತ್ತಿಕಲ್ ಭಾಗದಲ್ಲಿ ನಿರಂತರವಾಗಿ ಸಂಭವಿಸುತ್ತಿರುವ ಗುಡ್ಡ ಕುಸಿತ, ಮಣ್ಣು ಜರಿತ ಹಾಗೂ ರಸ್ತೆ ಅಸುರಕ್ಷತೆಯ ಘಟನೆಗಳು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿವೆ. ಕೋಟ್ಯಂತರ ರೂಪಾಯಿ ಸಾರ್ವಜನಿಕ ಹಣ ವೆಚ್ಚ ಮಾಡಿ ನಿರ್ಮಿಸಿರುವ ಹೆದ್ದಾರಿ ಇಂದು ಸಾರ್ವಜನಿಕರ ಜೀವಕ್ಕೆ ಅಪಾಯಕಾರಿಯಾಗಿ ಪರಿಣಮಿಸಿರುವುದು ಕಾಮಗಾರಿಯ ಗುಣಮಟ್ಟ ಮತ್ತು ಸಂಬಂಧಪಟ್ಟ ಇಲಾಖೆಗಳ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತಿದೆ. ಈ ಗಂಭೀರ ಪರಿಸ್ಥಿತಿಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ತೀವ್ರವಾಗಿ ಖಂಡಿಸುತ್ತದೆ.

ಪ್ರತಿ ಮಳೆಗಾಲದಲ್ಲೂ ಕೆತ್ತಿಕಲ್ ಪ್ರದೇಶದಲ್ಲಿ ಗುಡ್ಡ ಕುಸಿತ, ಮಣ್ಣು ಜರಿತ ಹಾಗೂ ರಸ್ತೆ ಬದಿಗಳ ಕುಸಿತ ಮರುಕಳಿಸುತ್ತಿರುವುದು ಕಾಮಗಾರಿಯ ಗುಣಮಟ್ಟದ ಕುರಿತು ಗಂಭೀರ ಅನುಮಾನಗಳನ್ನು ಹುಟ್ಟುಹಾಕಿದೆ. ಕಾಮಗಾರಿ ಆರಂಭವಾದ ದಿನದಿಂದಲೇ ಸ್ಥಳೀಯ ನಿವಾಸಿಗಳು, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಸುರಕ್ಷತೆ ಮತ್ತು ವೈಜ್ಞಾನಿಕ ಕಾಮಗಾರಿ ಕುರಿತು ಎಚ್ಚರಿಕೆ ನೀಡಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಅದನ್ನು ಗಂಭೀರವಾಗಿ ಪರಿಗಣಿಸದಿರುವ ಪರಿಣಾಮ ಇಂದು ಜನರು ಜೀವಭಯದಲ್ಲಿ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಗುತ್ತಿಗೆದಾರರ ನಿರ್ಲಕ್ಷ್ಯ ಮತ್ತು ಕಳಪೆ ಕಾಮಗಾರಿಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲು ಸಾಧ್ಯವಿಲ್ಲ. ಗುಣಮಟ್ಟದ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿದ್ದರೆ ಪ್ರತಿಯೊಂದು ಮಳೆಗಾಲದಲ್ಲೂ ಇಂತಹ ದುಸ್ಥಿತಿ ಎದುರಾಗುತ್ತಿರಲಿಲ್ಲ. ಸಾರ್ವಜನಿಕರ ತೆರಿಗೆ ಹಣವನ್ನು ದುರುಪಯೋಗಪಡಿಸಿಕೊಂಡು ಕಳಪೆ ಕಾಮಗಾರಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ.
ಜಿಲ್ಲಾಡಳಿತದ ಕಾರ್ಯವೈಖರಿಯೂ ನಿರಾಸಾದಾಯಕವಾಗಿದೆ. ಅಪಾಯದ ಸಾಧ್ಯತೆ ಇರುವ ಪ್ರದೇಶಗಳನ್ನು ಮುಂಚಿತವಾಗಿ ಗುರುತಿಸಿ ಶಾಶ್ವತ ಪರಿಹಾರ ಕೈಗೊಳ್ಳಬೇಕಾಗಿದ್ದ ಆಡಳಿತ, ಘಟನೆಗಳು ಸಂಭವಿಸಿದ ಬಳಿಕ ಮಾತ್ರ ಸ್ಥಳಕ್ಕೆ ಭೇಟಿ ನೀಡಿ ತಾತ್ಕಾಲಿಕ ಕ್ರಮಗಳಿಗೆ ಸೀಮಿತವಾಗುತ್ತಿರುವುದು ಅತ್ಯಂತ ಬೇಜವಾಬ್ದಾರಿತನವಾಗಿದೆ. ಅನಾಹುತ ಸಂಭವಿಸುವ ಮೊದಲು ಮುನ್ನೆಚ್ಚರಿಕೆ ವಹಿಸುವ ಬದಲು, ಅನಾಹುತಕ್ಕಾಗಿ ಕಾಯುತ್ತಿರುವಂತೆಯೇ ಆಡಳಿತದ ನಡೆ ಕಂಡುಬರುತ್ತಿದೆ.

ಇದೇ ವೇಳೆ ಕ್ಷೇತ್ರದ ಸಂಸದರು ಹಾಗೂ ಶಾಸಕರ ಮೌನ ಕೂಡ ಸಾರ್ವಜನಿಕರಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ಚುನಾವಣೆ ಸಂದರ್ಭದಲ್ಲಿ ಅಭಿವೃದ್ಧಿಯ ಭರವಸೆ ನೀಡಿದ ಜನಪ್ರತಿನಿಧಿಗಳು, ಇಂದು ಜನರ ಸುರಕ್ಷತೆಯ ಪ್ರಶ್ನೆಯಲ್ಲಿ ಮೌನ ವಹಿಸಿರುವುದು ಖಂಡನೀಯ. ಈ ಗಂಭೀರ ವಿಷಯವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಗಮನಕ್ಕೆ ತಂದು ಶಾಶ್ವತ ಪರಿಹಾರ ಕಲ್ಪಿಸುವುದು ಅವರ ಕರ್ತವ್ಯವಾಗಿದೆ ಎಂದು ಎಸ್ಡಿಪಿಐ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರಾಧ್ಯಕ್ಷರಾದ ಉಸ್ಮಾನ್ ಗುರುಪುರ ರವರು ತಿಳಿಸಿದರು.
ಕೆತ್ತಿಕಲ್ ಸೇರಿದಂತೆ ಗುಡ್ಡ ಕುಸಿತ ಸಂಭವಿಸುತ್ತಿರುವ ಪ್ರದೇಶಗಳಲ್ಲಿ ಶಾಶ್ವತ ತಡೆಗೋಡೆ, ವೈಜ್ಞಾನಿಕ ಇಳಿಜಾರು ಸಂರಕ್ಷಣೆ ಹಾಗೂ ಸಮರ್ಪಕ ನೀರು ಹರಿವಿನ ವ್ಯವಸ್ಥೆಯನ್ನು ತಕ್ಷಣ ನಿರ್ಮಿಸಬೇಕು. ಸಂಪೂರ್ಣ NH-169 ಕಾಮಗಾರಿಯ ಗುಣಮಟ್ಟದ ಬಗ್ಗೆ ಸ್ವತಂತ್ರ ತಾಂತ್ರಿಕ ತನಿಖೆ ನಡೆಸಿ, ವೈಫಲ್ಯಕ್ಕೆ ಹೊಣೆಗಾರರಾದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅಪಾಯಕಾರಿ ಪ್ರದೇಶಗಳಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ತುರ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೊಳಿಸಿ, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಈ ಸಂದರ್ಭದಲ್ಲಿ ಅವರು ಆಗ್ರಹಿಸಿದರು.

ಜನರ ಜೀವ ಯಾವುದೇ ಗುತ್ತಿಗೆದಾರನ ಲಾಭಕ್ಕಿಂತ ಅಮೂಲ್ಯವಾಗಿದೆ. ಸಾರ್ವಜನಿಕ ಹಣದಿಂದ ನಿರ್ಮಾಣವಾಗುವ ಪ್ರತಿಯೊಂದು ಅಭಿವೃದ್ಧಿ ಕಾಮಗಾರಿಯೂ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಬೇಕು. NH-169 ಕಾಮಗಾರಿಯ ವೈಫಲ್ಯಕ್ಕೆ ಹೊಣೆಗಾರರ ವಿರುದ್ಧ ಸರ್ಕಾರ ಕೂಡಲೇ ಕಠಿಣ ಕ್ರಮ ಕೈಗೊಂಡು, ಸಾರ್ವಜನಿಕರ ಜೀವ ರಕ್ಷಿಸಲು ಅಗತ್ಯ ಕ್ರಮಗಳನ್ನು ಜಾರಿಗೆ ತರಬೇಕು. ಇಲ್ಲವಾದಲ್ಲಿ, ಜನರ ಹಿತಾಸಕ್ತಿಗಾಗಿ SDPI ಪ್ರಜಾಸತ್ತಾತ್ಮಕ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಿದೆ ಎಂದು ಉಸ್ಮಾನ್ ಗುರುಪುರ ರವರು ಎಚ್ಚರಿಸಿದ್ದಾರೆ.

