ಮಂಗಳೂರು, ಆಗಸ್ಟ್ 6: ಕಳೆದ ಹತ್ತು ವರ್ಷಗಳಿಂದ ರಾಜ್ಯಾದ್ಯಂತ ಅಗತ್ಯವಿರುವ ರೋಗಿಗಳಿಗೆ ರಕ್ತ ಪೂರೈಕೆ ಹಾಗೂ ರಕ್ತದಾನ ಜಾಗೃತಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ.) ಸಂಸ್ಥೆಯ 10ನೇ ವಾರ್ಷಿಕೋತ್ಸವ ಕಾರ್ಯಕ್ರಮವು ಆಗಸ್ಟ್ 9ರಂದು ಮಂಗಳೂರಿನ ಸಿಟಿ ಸೆಂಟರ್ ಮಾಲ್‌ನಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಹಾಗೂ ಹತ್ತನೇ ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷ ಮುಸ್ತಫಾ ದೆಮ್ಮೆಲೆ ತಿಳಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.30 ಗಂಟೆಗೆ ಮಂಗಳೂರು ನಗರದ ವಿವಿಧ ಭಾಗಗಳಲ್ಲಿ ರಕ್ತದಾನದ ಮಹತ್ವವನ್ನು ಸಾರುವ ಬೃಹತ್ ವಾಹನ ಜಾಥಾ ಆಯೋಜಿಸಲಾಗಿದೆ ಎಂದು ಹೇಳಿದರು.
ಇದರ ಜೊತೆಗೆ, ‘ರಕ್ತದಾನ ಮತ್ತು ಆರೋಗ್ಯ’ ವಿಷಯದಡಿ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ ನಡೆಯಲಿದ್ದು, ಯುವಜನರಲ್ಲಿ ರಕ್ತದಾನದ ಕುರಿತು ಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ ಎಂದು ತಿಳಿಸಿದರು.

ಮಧ್ಯಾಹ್ನ 2 ಗಂಟೆಗೆ ಸಿಟಿ ಸೆಂಟರ್ ಮಾಲ್‌ನಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ವಿವಿಧ ಧರ್ಮಗಳ ಧಾರ್ಮಿಕ ಗುರುಗಳು ಜಂಟಿಯಾಗಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರಮುಖ ರಾಜಕೀಯ ನಾಯಕರು, ಸಾಮಾಜಿಕ ಮುಖಂಡರು, ಧಾರ್ಮಿಕ ನಾಯಕರು, ಮಂಗಳೂರು ನಗರ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ರಕ್ತದಾನದ ಮಹತ್ವವನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ಕಿರು ನಾಟಕ ಪ್ರದರ್ಶನ ಕೂಡ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಲಿದೆ ಎಂದು ಅವರು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಪ್ರಮುಖರಾದ ರಿಯಾಝ್ ಅಲಿ, ಮುಝಮ್ಮಿಲ್ ನೂಯಿ ಅಡ್ಡೂರು, ಸಮೀರ್ ಸೀಕೋ ಸೇರಿದಂತೆ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

