ಮಂಜೇಶ್ವರ /ಬೆಂಗಳೂರು: ಕೋಝಿಕ್ಕೋಡಿನಿಂದ ಬೆಂಗಳೂರಿಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆಯಲ್ಲಿ ಬಸ್ ಚಾಲಕ ಹಾಗೂ ನಿರ್ವಾಹಕ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯ ರಾಮನಗರದ ಬಿದದಿ ಬಳಿ ಶನಿವಾರ ಬೆಳಗ್ಗೆ 6:40 ರ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ.
ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಸೂಚನಾ ಫಲಕಕ್ಕೆ ಡಿಕ್ಕಿಹೊಡೆದು ತಲೆಕೆಳಗಾಗಿ ಮಗುಚಿ ಬಿದ್ದಿದೆ.ಅಪಘಾತದಲ್ಲಿ ಬಸ್ ಚಾಲಕ ಬಿಜಿಲೇಶ್ ಮತ್ತು ನಿರ್ವಾಹಕ ಅರುಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಈ ದುರ್ಘಟನೆಯಲ್ಲಿ ಸುಮಾರು 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಇವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.

ಗಾಯಗೊಂಡವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.ಡಿಕ್ಕಿಯ ರಭಸಕ್ಕೆ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಗಾಯಗೊಂಡವರಲ್ಲಿ ಹೆಚ್ಚಿನವರು ಕನ್ನಡಿಗರು ಮತ್ತು ಕನ್ನಡಿಗರಲ್ಲದ ಇತರೆ ಪ್ರಯಾಣಿಕರು (ಮುಖ್ಯವಾಗಿ ಮಲಯಾಳಿಗರು) ಇದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

