ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಆ.13ರಂದು ಬೆಂಗಳೂರಿನಲ್ಲಿ ಸಮಾವೇಶ

ಮಂಗಳೂರು, ಆ.8: ರಾಜ್ಯ ಕಾರ್ಮಿಕ ಇಲಾಖೆ ವಿವಿಧ ಉದ್ಯೋಗಗಳಿಗೆ ಕನಿಷ್ಠ ವೇತನ ನಿಗದಿಪಡಿಸಿ ಆದೇಶ ಹೊರಡಿಸಿದ್ದರೂ, ಪರಿಷ್ಕೃತ ವೇತನವನ್ನು ಇನ್ನೂ ಜಾರಿಗೊಳಿಸಿಲ್ಲ ಎಂದು ಆರೋಪಿಸಿರುವ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹೊರಗುತ್ತಿಗೆ ನೌಕರರ ಸಂಘ, ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಆ.13ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಗ್ರಹ ಸಮಾವೇಶ ಆಯೋಜಿಸಿದೆ.

ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಬಿ. ನಾಗಣ್ಣ ಗೌಡ, ಕಾರ್ಮಿಕರ ವೇತನ ಪರಿಷ್ಕರಣೆ ವಿಚಾರದಲ್ಲಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜನಪರ ಆಡಳಿತ ನೀಡುವ ನಿರೀಕ್ಷೆಯಿಂದ ರಾಜ್ಯದ ಜನರು ಸರ್ಕಾರಕ್ಕೆ ಬಹುಮತ ನೀಡಿದ್ದು, ಸರ್ಕಾರವು ಜನರ ಬದುಕಿನ ಸಮಸ್ಯೆಗಳಿಗೆ ಸ್ಪಂದಿಸಬೇಕು. ಕಳೆದ ಮೂರುವರೆ ವರ್ಷಗಳಿಂದ ಸರ್ಕಾರ ಗ್ಯಾರಂಟಿ ಯೋಜನೆಗಳ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡಿದೆ. ಆದರೆ, ಬೆಲೆ ಏರಿಕೆಗೆ ಅನುಗುಣವಾಗಿ ನೌಕರರು ಮತ್ತು ಕಾರ್ಮಿಕರ ವೇತನ ಪರಿಷ್ಕರಣೆ ಮಾಡುವ ವಿಚಾರದಲ್ಲಿ ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದರು.

ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸದಿದ್ದರೆ, ಮುಂದಿನ ಚುನಾವಣೆಯಲ್ಲಿ ಸರ್ಕಾರದ ವಿರುದ್ಧ ಮತ ಚಲಾಯಿಸುವಂತೆ ನೌಕರರು ಮತ್ತು ಕಾರ್ಮಿಕರಿಗೆ ಕರೆ ನೀಡುವ ಅನಿವಾರ್ಯ ಪರಿಸ್ಥಿತಿ ಎದುರಾಗಲಿದೆ ಎಂದು ನಾಗಣ್ಣ ಗೌಡ ಎಚ್ಚರಿಸಿದರು.

ಆ.13ರಂದು ಬೆಂಗಳೂರಿನಲ್ಲಿ ನಡೆಯಲಿರುವ ಆಗ್ರಹ ಸಮಾವೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಮಾರು 250 ಮಂದಿ ಭಾಗವಹಿಸಲಿದ್ದಾರೆ. ಸಮಾವೇಶದ ಮೂಲಕ ರಾಜ್ಯ ಸರ್ಕಾರಕ್ಕೆ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಗುವುದು ಎಂದು ಅವರು ತಿಳಿಸಿದರು.

ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯ ನೌಕರರ ಪ್ರಮುಖ ಬೇಡಿಕೆಗಳನ್ನೂ ಸರ್ಕಾರ ತಕ್ಷಣ ಪರಿಗಣಿಸಿ, ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಸಮಾವೇಶದ ಮೂಲಕ ಆಗ್ರಹಿಸಲಾಗುವುದು ಎಂದರು.

ರಾಜ್ಯದ ವಿವಿಧ ಇಲಾಖೆಗಳ ಸುಮಾರು 2 ಲಕ್ಷ ಹೊರಗುತ್ತಿಗೆ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನ ಜಾರಿಗೊಳಿಸಲು ಸರ್ಕಾರವೇ ಹೊರಡಿಸಿರುವ ಆದೇಶವನ್ನು ಅನುಷ್ಠಾನಗೊಳಿಸಲು ಯಾವುದೇ ಕಾನೂನಾತ್ಮಕ ಅಡ್ಡಿಯಿಲ್ಲ. ಕಾರ್ಮಿಕ ಇಲಾಖೆ ಹೆಚ್ಚುವರಿ ಕನಿಷ್ಠ ವೇತನದ ಮಾಹಿತಿಯನ್ನು ಒದಗಿಸುವುದಕ್ಕೆ ಮಾತ್ರ ಸೀಮಿತವಾಗಿದ್ದು, ಅಧಿಸೂಚನೆ ಹೊರಡಿಸುವ ಕಾರ್ಯವನ್ನು ಮಾಡುತ್ತಿಲ್ಲ ಎಂದು ಅವರು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಕರಾವಳಿ ವಿಭಾಗದ ಸಂಚಾಲಕ ಬಿ.ಕೆ. ಅಣ್ಣಪ್ಪ, ಮುಖಂಡರಾದ ಮಂಜುನಾಥ, ಕೃಷ್ಣ ಪೂಜಾರಿ, ಮಲ್ಲನಾಥ, ಯಶವಂತ್ ಹಾಗೂ ಡಾ. ನಾಗೇಂದ್ರ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!