ಬಂಟ್ವಾಳ: ಕಲ್ಲಡ್ಕದಲ್ಲಿ ಆಗಸ್ಟ್ 13ರಂದು ವಾಹನ ಜಾಥಾ ನಡೆಸಲಾಗುವುದು ಎಂಬ ಪೋಸ್ಟರ್ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯಲಾಗಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ತಿಳಿಸಿದ್ದಾರೆ.

ಸಾರ್ವಜನಿಕರು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ಅಥವಾ ಪೊಲೀಸ್ ಇಲಾಖೆಯಿಂದ ಪೂರ್ವಾನುಮತಿ ಪಡೆಯದೆ ವಾಹನ ಜಾಥಾ ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಿದರೆ, ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೆ, ಸಾರ್ವಜನಿಕರು ಯಾವುದೇ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮುನ್ನ, ಸಂಬಂಧಪಟ್ಟ ಇಲಾಖೆಯಿಂದ ಅಗತ್ಯ ಪೂರ್ವಾನುಮತಿ ಪಡೆಯಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಂಡು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಡಾ. ಅರುಣ್ ಕೆ ಅವರು ಮನವಿ ಮಾಡಿದ್ದಾರೆ.

