ಉಳ್ಳಾಲ: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಮಂಗಳೂರು ವಿಧಾನಸಭಾ ಕ್ಷೇತ್ರದ ತಿರಂಗಾ ಯಾತ್ರೆ ಸಮಿತಿ ವತಿಯಿಂದ ತೊಕ್ಕೊಟ್ಟಿನಲ್ಲಿ ಬೃಹತ್ ತಿರಂಗಾ ಯಾತ್ರೆ ನಡೆಯಿತು. ತೊಕ್ಕೊಟ್ಟು ಓವರ್ಬ್ರಿಡ್ಜ್ನಿಂದ ಕೇಂದ್ರ ಬಸ್ ನಿಲ್ದಾಣದವರೆಗೆ ನಡೆದ ಯಾತ್ರೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದರು.

ಮಾಜಿ ವಿಧಾನಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಮಾತನಾಡಿ, ತಿರಂಗಾ ಧ್ವಜವು ತ್ಯಾಗ, ಶಾಂತಿ ಮತ್ತು ಪ್ರಗತಿಯ ಸಂಕೇತವಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕರು ತ್ಯಾಗ, ಬಲಿದಾನ ಮಾಡಿದ್ದಾರೆ. ಪೋರ್ಚುಗೀಸರ ವಿರುದ್ಧ ಹೋರಾಡಿದ ಉಳ್ಳಾಲದ ರಾಣಿ ಅಬ್ಬಕ್ಕಳ ಸಾಹಸವೂ ಸ್ಮರಣೀಯವಾಗಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದ್ದು, ದಿಟ್ಟ ನಿರ್ಧಾರಗಳಿಗೆ ಎಲ್ಲರೂ ಬೆಂಬಲ ನೀಡಬೇಕು ಎಂದು ಅವರು ಕರೆ ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಆ.13ರಂದು ಪ್ರತಿಯೊಬ್ಬರ ಮನೆಯಲ್ಲೂ ತಿರಂಗಾ ಹಾರಿಸುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ವಿಕಸಿತ ಭಾರತದ ಪರಿಕಲ್ಪನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ತಿರಂಗಾ ಯಾತ್ರೆ ಮಹತ್ವದ ಹೆಜ್ಜೆಯಾಗಿದೆ ಎಂದರು.

ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಜಗದೀಶ ಆಳ್ವ ಕುವೆತ್ತಬೈಲು ಮಾತನಾಡಿದರು. ಕಾರ್ಗಿಲ್ ಯೋಧ ಪ್ರವೀಣ್ ಶೆಟ್ಟಿ ಪಿಲಾರು ತಿರಂಗಾ ಯಾತ್ರೆಗೆ ಚಾಲನೆ ನೀಡಿದರು. ಬಿಜೆಪಿ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಮೋಹನ್ ರಾಜ್ ಕೆ.ಆರ್. ಸ್ವಾಗತಿಸಿದರು. ದಯಾನಂದ ತೊಕ್ಕೊಟ್ಟು ವಂದಿಸಿದರು.

