ಮಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಪೊಲೀಸ್ ಬಿಸಿ

ಮಂಗಳೂರು, ಆ.14: ರಸ್ತೆ ಅಪಘಾತಗಳನ್ನು ತಡೆಗಟ್ಟುವ, ಸಂಚಾರ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಹಾಗೂ ವಾಹನಗಳ ಸುಗಮ ಸಂಚಾರವನ್ನು ಖಚಿತಪಡಿಸುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ವಿಶೇಷ ಸಂಚಾರ ಕಾರ್ಯಾಚರಣೆಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ.

ಈ ಕಾರ್ಯಾಚರಣೆಯ ಭಾಗವಾಗಿ ಪಾದಚಾರಿಗಳ ಸುರಕ್ಷತೆ ಮತ್ತು ಸಾರ್ವಜನಿಕ ವಾಹನಗಳ ನಿರ್ಬಂಧರಹಿತ ಸಂಚಾರಕ್ಕೆ ಅಡ್ಡಿಯಾಗುವ ನೋ-ಪಾರ್ಕಿಂಗ್, ಫುಟ್‌ಪಾತ್ ಪಾರ್ಕಿಂಗ್, ಅನಧಿಕೃತ ಪಾರ್ಕಿಂಗ್, ಎರಡು ಬದಿಗಳಲ್ಲಿ ವಾಹನ ನಿಲುಗಡೆ ಸೇರಿದಂತೆ ವಿವಿಧ ಪಾರ್ಕಿಂಗ್ ನಿಯಮ ಉಲ್ಲಂಘನೆಗಳ ವಿರುದ್ಧ ಜೂನ್ 2026ರಿಂದ ಇದುವರೆಗೆ ಒಟ್ಟು 7,490 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿ ₹3,07,600 ದಂಡ ವಸೂಲಿ ಮಾಡಲಾಗಿದೆ. ದಾಖಲಾಗಿರುವ ಪ್ರಕರಣಗಳಲ್ಲಿ 1,080 ಫುಟ್‌ಪಾತ್ ಪಾರ್ಕಿಂಗ್ ಪ್ರಕರಣಗಳು ಸೇರಿವೆ.

ಇದೇ ವೇಳೆ, ನಕಲಿ ಹಾಗೂ ದೋಷಪೂರಿತ ನಂಬರ್ ಪ್ಲೇಟ್‌ಗಳ ಬಳಕೆಯನ್ನು ತಡೆಯುವ ನಿಟ್ಟಿನಲ್ಲಿ ಆಗಸ್ಟ್ 4ರಿಂದ 12ರವರೆಗೆ ವಿಶೇಷ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು. ಈ ಅವಧಿಯಲ್ಲಿ ದೋಷಪೂರಿತ ನಂಬರ್ ಪ್ಲೇಟ್ ಹೊಂದಿದ್ದ 258 ವಾಹನಗಳು ಹಾಗೂ ನಂಬರ್ ಪ್ಲೇಟ್ ಅಳವಡಿಸದೇ ಸಂಚರಿಸುತ್ತಿದ್ದ 74 ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಒಟ್ಟು 332 ಪ್ರಕರಣಗಳನ್ನು ದಾಖಲಿಸಿ ₹3,01,000 ದಂಡ ವಿಧಿಸಲಾಗಿದೆ.

ವಾಹನ ಮಾಲೀಕರು ತಮ್ಮ ವಾಹನಗಳಿಗೆ ನಿಗದಿತ ನಿಯಮಾನುಸಾರ ಸ್ಪಷ್ಟವಾಗಿ ಕಾಣುವಂತೆ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಹೆಚ್‌ಎಸ್‌ಆರ್‌ಪಿ (HSRP) ನಂಬರ್ ಪ್ಲೇಟ್ ಅಳವಡಿಕೆಯನ್ನು ಸರ್ಕಾರ ಕಡ್ಡಾಯಗೊಳಿಸಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಮುಂದೆಯೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು ನಗರ ಪೊಲೀಸ್ ವತಿಯಿಂದ ಕೈಗೊಳ್ಳಲಾಗುತ್ತಿರುವ ಈ ವಿಶೇಷ ಕಾರ್ಯಾಚರಣೆಗಳು ಮುಂದಿನ ದಿನಗಳಲ್ಲಿಯೂ ಮುಂದುವರಿಯಲಿದ್ದು, ಸಾರ್ವಜನಿಕರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸುರಕ್ಷಿತ ಸಂಚಾರಕ್ಕೆ ಸಹಕರಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!