ಕೋಲ್ಕತ್ತಾ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ: ಮಗು ಸೇರಿ 9 ಮಂದಿ ಸಾವು

ಕೋಲ್ಕತ್ತಾ: ಕೋಲ್ಕತ್ತಾದ ಜನನಿಬಿಡ ನ್ಯೂ ಮಾರ್ಕೆಟ್ ಪ್ರದೇಶದ ಫ್ರೀ ಸ್ಕೂಲ್ ಸ್ಟ್ರೀಟ್ ಬಳಿಯ ಹೋಟೆಲ್‌ವೊಂದರಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮಗು ಸೇರಿದಂತೆ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ.

ಬೆಂಕಿ ಕಾಣಿಸಿಕೊಂಡ ಬಳಿಕ ಹೋಟೆಲ್‌ನಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದ್ದು, ಸುಮಾರು 80 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಮೃತರಲ್ಲಿ ಚಿಕಿತ್ಸೆಗಾಗಿ ಭಾರತಕ್ಕೆ ಆಗಮಿಸಿದ್ದ ಬಾಂಗ್ಲಾದೇಶದ ಪ್ರಜೆಗಳು ಹಾಗೂ ಜಾರ್ಖಂಡ್ ನಿವಾಸಿಯೊಬ್ಬರು ಸೇರಿದ್ದಾರೆ ಎಂದು ತಿಳಿದುಬಂದಿದೆ.

ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳ ಹಾಗೂ ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ಧಾವಿಸಿ, ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿವೆ.

ಹೋಟೆಲ್‌ನಲ್ಲಿ ಅಗತ್ಯ ಮೂಲಭೂತ ಅಗ್ನಿ ಸುರಕ್ಷತಾ ಕ್ರಮಗಳ ಕೊರತೆ ಕಂಡುಬಂದಿದೆ ಎನ್ನಲಾಗಿದೆ. ಏರ್‌ಕಂಡೀಷನರ್‌ನಲ್ಲಿ ಉಂಟಾದ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಘಟನೆ ಬಳಿಕ ಹೋಟೆಲ್ ಮಾಲೀಕ ಹಾಗೂ ಕೆಲ ಸಿಬ್ಬಂದಿ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಗ್ನಿ ಅವಘಡದ ನಿಖರ ಕಾರಣ ಹಾಗೂ ಸುರಕ್ಷತಾ ಲೋಪಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!