ಮಂಗಳೂರು:* ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್ನ ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ಸಮಿತಿ ರಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ವಿಭು ಬಖ್ರು ಭರವಸೆ ನೀಡಿದ್ದಾರೆ ಎಂದು ಹೈಕೋರ್ಟ್ ಕರಾವಳಿ ಸಂಚಾರಿ ಪೀಠ ಸ್ಥಾಪನೆ ಹೋರಾಟ ಸಮಿತಿಯ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ತಿಳಿಸಿದ್ದಾರೆ.

ಕರಾವಳಿ ಭಾಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಕರ್ನಾಟಕ ಸರ್ಕಾರ ಈಗಾಗಲೇ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅಗತ್ಯವಿರುವ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಅವರು ಹೇಳಿದರು.
ಈ ಹಿನ್ನೆಲೆಯಲ್ಲಿ ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ವಿವಿಧ ಕಡೆಗಳಲ್ಲಿ ವ್ಯಕ್ತವಾಗುತ್ತಿರುವ ಅಭಿಪ್ರಾಯಗಳು, ಜಿಲ್ಲೆಗಳ ನಡುವಿನ ಚರ್ಚೆಗಳು ಹಾಗೂ ಎದುರಾಗಿರುವ ಅಡೆತಡೆಗಳ ಕುರಿತು ಹೋರಾಟ ಸಮಿತಿಯ ನಿಯೋಗವು ಬೆಂಗಳೂರಿನಲ್ಲಿ ಮುಖ್ಯ ನ್ಯಾಯಮೂರ್ತಿಗಳನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ ವಿಚಾರ ವಿನಿಮಯ ನಡೆಸಿತು.

ನಿಯೋಗದಲ್ಲಿ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷ ಜಗದೀಶ್ ಶೆಣವ, ಉಡುಪಿ ಬಾರ್ ಅಸೋಸಿಯೇಷನ್ ಅಧ್ಯಕ್ಷ ರೊನಾಲ್ಡ್ ಪ್ರವೀಣ್, ಮಾಜಿ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷ ರಾಘವೇಂದ್ರ ರಾವ್, ಪ್ರಧಾನ ಜಿಲ್ಲಾ ಸರ್ಕಾರಿ ವಕೀಲರು ಹಾಗೂ ಕರಾವಳಿ ಹೈಕೋರ್ಟ್ ಪೀಠ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ನ್ಯಾಯಮೂರ್ತಿಗಳು, ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠದ ಅಗತ್ಯತೆಯ ಕುರಿತು ತಮಗೆ ಅರಿವಿದ್ದು, ನಿಯೋಗದೊಂದಿಗೆ ವಿಷಯದ ಬಗ್ಗೆ ವಿವರವಾಗಿ ಚರ್ಚಿಸಿದರು. ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿದ ವಾಸ್ತವಾಂಶಗಳು ಹಾಗೂ ವಿವಿಧ ಅಂಶಗಳನ್ನು ಪರಿಶೀಲಿಸಲು ಕೂಡಲೇ ಸಮಿತಿ ರಚಿಸುವಂತೆ ನಿಯೋಗ ಸಲ್ಲಿಸಿದ ಮನವಿಯನ್ನು ಪರಿಗಣಿಸುವುದಾಗಿ ತಿಳಿಸಿದರು.

ಸಮಿತಿಯ ಮೂಲಕ ವಾಸ್ತವಾಂಶಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯ ನ್ಯಾಯಮೂರ್ತಿಗಳು ಭರವಸೆ ನೀಡಿದ್ದಾರೆ ಎಂದು ಐವನ್ ಡಿಸೋಜಾ ಹೇಳಿದರು.
ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಬೇಕು ಎಂಬ ಬೇಡಿಕೆಗೆ ಕರಾವಳಿ ಭಾಗದ ಬಾರ್ ಅಸೋಸಿಯೇಷನ್ ಸದಸ್ಯರು, ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳು, ಕಾರ್ಯಕರ್ತರು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಂದ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.
ಕರ್ನಾಟಕ ಸರ್ಕಾರವೂ ಮಂಗಳೂರಿನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುವ ಸಂದರ್ಭದಲ್ಲಿ ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಯೊಂದಿಗೆ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯ ವಿಚಾರವೂ ಪ್ರಮುಖವಾಗಿ ಚರ್ಚೆಯಾಗುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದರು.
ಸಂಚಾರಿ ಪೀಠ ಸ್ಥಾಪನೆಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಸಿದ್ಧವಿದೆ. ಈ ಕುರಿತು ಸೆಪ್ಟೆಂಬರ್ ತಿಂಗಳಲ್ಲಿ ಮತ್ತೊಮ್ಮೆ ಭೇಟಿ ನೀಡಿ ಚರ್ಚಿಸುವುದಾಗಿ ಮುಖ್ಯ ನ್ಯಾಯಮೂರ್ತಿಗಳು ತಿಳಿಸಿರುವುದು ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಗೆ ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಐವನ್ ಡಿಸೋಜಾ ಹೇಳಿದರು.


