ಸೆ.6ರಂದು ಮಂಗಳೂರಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಬಂಟ ಕ್ರೀಡೋತ್ಸವ

ಮಂಗಳೂರು: ಬಂಟ ಬಾಂಧವರನ್ನು ಒಗ್ಗೂಡಿಸುವ ಉದ್ದೇಶದಿಂದ ಬಂಟರ ಯಾನೆ ನಾಡವರ ಮಾತೃಸಂಘ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳು, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಓಂಕಾರ ನಗರ, ಬಂಟ್ಸ್ ಹಾಸ್ಟೆಲ್ ಮಂಗಳೂರು ಇವರ ಸಹಯೋಗದಲ್ಲಿ ಸೆಪ್ಟೆಂಬರ್ 6ರಂದು ಅಂತರ್ ಜಿಲ್ಲಾ ಮಟ್ಟದ ಬಂಟ ಕ್ರೀಡೋತ್ಸವವನ್ನು ಆಯೋಜಿಸಲಾಗಿದೆ.

ನಗರದ ಬಂಟ್ಸ್ ಹಾಸ್ಟೆಲ್‌ನ ಬಂಟರ ಮಾತೃಸಂಘದ ಆವರಣ ಹಾಗೂ ಶ್ರೀ ರಾಮಕೃಷ್ಣ ಶಾಲಾ ಮೈದಾನದಲ್ಲಿ ಬೆಳಗ್ಗೆ 9 ಗಂಟೆಯಿಂದ ಕ್ರೀಡೋತ್ಸವ ನಡೆಯಲಿದೆ ಎಂದು ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಟ್ರಸ್ಟಿ ಡಾ. ಆಶಾಜ್ಯೋತಿ ರೈ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಗ್ರಾಮೀಣ ಹಾಗೂ ನಗರ ಪ್ರದೇಶದ ಕ್ರೀಡಾಪಟುಗಳು ಸಕ್ರಿಯವಾಗಿ ಭಾಗವಹಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಹೇಳಿದರು.

ಒಂದನೇ ತರಗತಿಯಿಂದ 70 ವರ್ಷ ವಯೋಮಾನದವರೆಗಿನ ಬಂಟ ಬಾಂಧವರು ಭಾಗವಹಿಸುವಂತೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಮಹಿಳೆಯರಿಗಾಗಿ ತ್ರೋಬಾಲ್, ಹಗ್ಗಜಗ್ಗಾಟ, ವಿವಿಧ ಜಾನಪದ ಕ್ರೀಡೆಗಳು ಸೇರಿದಂತೆ ಹಲವು ಆಕರ್ಷಕ ಸ್ಪರ್ಧೆಗಳು ನಡೆಯಲಿವೆ. ಪುರುಷರಿಗಾಗಿ ಹಗ್ಗಜಗ್ಗಾಟ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಸ್ಥಳದಲ್ಲಿಯೇ ಮನರಂಜನಾ ಸ್ಪರ್ಧೆಗಳನ್ನೂ ಆಯೋಜಿಸಲಾಗುವುದು ಎಂದರು.

ಮೂರು ವರ್ಷದೊಳಗಿನ ಪುಟಾಣಿಗಳಿಗಾಗಿ ‘ಮುದ್ದು ಕೃಷ್ಣ’ ಹಾಗೂ ನಾಲ್ಕರಿಂದ ಆರು ವರ್ಷದೊಳಗಿನ ಮಕ್ಕಳಿಗಾಗಿ ‘ಬಾಲಕೃಷ್ಣ’ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 10 ಗಂಟೆಗೆ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ. ಈ ಸಂದರ್ಭ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಿದ ಪ್ರತಿಭಾವಂತ ಕ್ರೀಡಾಪಟುಗಳನ್ನು ಗೌರವಿಸಲಾಗುವುದು.

ಬೆಳಗ್ಗಿನಿಂದ ಸಂಜೆಯವರೆಗೆ ನಡೆಯುವ ಕ್ರೀಡೋತ್ಸವದ ಸಮಾರೋಪ ಸಮಾರಂಭ ಸಂಜೆ ನಡೆಯಲಿದ್ದು, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಗುವುದು.

ಪತ್ರಿಕಾಗೋಷ್ಠಿಯಲ್ಲಿ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಪ್ರಮುಖರಾದ ಜಗದೀಶ್ ಶೆಟ್ಟಿ ಬಿಜೈ ಹಾಗೂ ಸದಾಶಿವ ಶೆಟ್ಟಿ ಬಿಜೈ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!