ಉಡುಪಿ: ಮರ್ಣೆ ಗ್ರಾಮದ ಕುಕ್ಕಿಪಲ್ಕೆ ಪ್ರದೇಶದಲ್ಲಿ ಸರ್ಕಾರಿ ಸಿರಾಸ್ತಿ ಜಮೀನನ್ನು ಅತಿಕ್ರಮಿಸಿ, ಯಾವುದೇ ಕಾನೂನುಬದ್ಧ ಪರವಾನಿಗೆ ಇಲ್ಲದೆ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ ಹಾಗೂ ಸ್ಫೋಟಕ ವಸ್ತುಗಳನ್ನು ಬಳಸಿ ಕಲ್ಲು ಬಂಡೆಗಳನ್ನು ಸ್ಫೋಟಿಸಲಾಗುತ್ತಿದೆ ಎಂದು ಸ್ಥಳೀಯ ನಿವಾಸಿಗಳು ಮಣಿಪಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಪ್ರಕಾರ, ಮರ್ಣೆ ಗ್ರಾಮದ ಸರ್ವೆ ನಂ. 112/2ರ 1.54 ಎಕರೆ ಸರ್ಕಾರಿ ಜಮೀನಿನಲ್ಲಿ ಶ್ರೀಮತಿ ರೋಜಿನಾ ರೋಡ್ರಿಗಸ್ ಹಾಗೂ ಅವರ ಪರವಾಗಿ ಅಧಿಕಾರ ಪತ್ರ ಹೊಂದಿರುವ ರಿಚಾರ್ಡ್ ಪೌಲ್ ಫೆರಾವೋ ಅವರು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಗಣಿಗಾರಿಕೆ ನಡೆಯುತ್ತಿರುವ ಪ್ರದೇಶದ ಸುಮಾರು 100 ಮೀಟರ್ ವ್ಯಾಪ್ತಿಯಲ್ಲಿ ಕನಿಷ್ಠ ಐದು ವಸತಿ ಮನೆಗಳಿದ್ದು, ಸ್ಫೋಟದ ವೇಳೆ ಉಂಟಾಗುವ ಶಬ್ದ ಮತ್ತು ಕಂಪನದಿಂದ ಮನೆಗಳ ಗೋಡೆ ಹಾಗೂ ಕಟ್ಟಡಗಳಿಗೆ ಹಾನಿಯಾಗುವ ಆತಂಕವಿದೆ ಎಂದು ನಿವಾಸಿಗಳು ತಿಳಿಸಿದ್ದಾರೆ.
ಈ ಬಗ್ಗೆ ಲೋಕಾಯುಕ್ತ ನ್ಯಾಯಾಲಯದಲ್ಲಿ ಎಂವೈಎಸ್.(2293/2023) ಪ್ರಕಾರ ಕಂದಾಯ ಅಧಿಕಾರಿಗಳ ವಿರುದ್ಧ ವಿಚಾರಣೆ ಬಾಕಿ ಇರುತ್ತದೆ ಎಂದು ದೂರುದಾರರು ತಿಳಿಸಿದ್ದಾರೆ.

ಈ ಜಮೀನಿಗೆ ಸಂಬಂಧಿಸಿದ ನಕ್ಷೆ ಹಾಗೂ ದಾಖಲೆಗಳನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಆರೋಪ ಸೇರಿದಂತೆ ಇತರ ವಿಚಾರಗಳ ಬಗ್ಗೆ ಈಗಾಗಲೇ ಲೋಕಾಯುಕ್ತ ನ್ಯಾಯಾಲಯದಲ್ಲಿ ಅಧಿಕಾರಿಗಳ ವಿರುದ್ಧ ವಿಚಾರಣೆ ಬಾಕಿ ಇದ್ದರೂ, ಅದನ್ನು ಲೆಕ್ಕಿಸದೆ ಗಣಿಗಾರಿಕೆ ಮತ್ತು ಸ್ಫೋಟ ಚಟುವಟಿಕೆ ಮುಂದುವರಿಸಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.

ಸೆಪ್ಟೆಂಬರ್ 5ರಂದು ಬೆಳಗ್ಗೆ ಸುಮಾರು 11 ಗಂಟೆಗೆ ಯಾವುದೇ ಕಾನೂನುಬದ್ಧ ಅನುಮತಿ ಇಲ್ಲದೆ ಕಲ್ಲು ಬಂಡೆಗಳನ್ನು ಸ್ಫೋಟಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸ್ಫೋಟದಿಂದ ಸುತ್ತಮುತ್ತಲಿನ ಮನೆಗಳಿಗೆ ತೀವ್ರ ಕಂಪನ ಉಂಟಾಗಿ ನಿವಾಸಿಗಳಲ್ಲಿ ಭಯ ಮತ್ತು ಆತಂಕ ಸೃಷ್ಟಿಯಾಗಿದೆ ಎಂದು ತಿಳಿಸಲಾಗಿದೆ.
ಕಲ್ಲುಗಳ ಸ್ಫೋಟದಿಂದ ಕಲ್ಲಿನ ತುಂಡುಗಳು ಹಾರಿ ಬಂದು ಸಾರ್ವಜನಿಕರಿಗೆ ಅಥವಾ ಮನೆಗಳಿಗೆ ಹಾನಿಯಾಗುವ ಸಾಧ್ಯತೆಯೂ ಇದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ, ಗ್ರಾಮ ಪಂಚಾಯಿತಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಗತ್ಯ ಅನುಮತಿ ಪಡೆಯದೆ ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಸರ್ಕಾರಿ ಜಮೀನಿನ ಅತಿಕ್ರಮಣ, ಅಕ್ರಮ ಕಲ್ಲು ಗಣಿಗಾರಿಕೆ ಹಾಗೂ ಸ್ಫೋಟಕ ವಸ್ತುಗಳ ಬಳಕೆಯ ಕುರಿತು ಸಮಗ್ರ ತನಿಖೆ ನಡೆಸಿ, ಸಾರ್ವಜನಿಕರ ಜೀವ ಮತ್ತು ಆಸ್ತಿಯನ್ನು ರಕ್ಷಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ದೂರುದಾರರು ಪೊಲೀಸರಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.


