ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಶಿಷ್ಟ ಸಮುದಾಯಕ್ಕೆ ಮೀಸಲಿಟ್ಟಿರುವ ಡಿಸಿ ಮನ್ನಾ ಭೂಮಿಯನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡುವ ಕುರಿತು ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಣಯ ಕೈಗೊಳ್ಳಬೇಕು. ಒಂದು ತಿಂಗಳೊಳಗೆ ಹಂಚಿಕೆಗೆ ಕ್ರಮ ಕೈಗೊಳ್ಳದಿದ್ದರೆ ಹಂತ ಹಂತವಾಗಿ ಉಗ್ರ ಹೋರಾಟ ನಡೆಸಲಾಗುವುದು ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಎಚ್ಚರಿಕೆ ನೀಡಿದೆ.

ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಪ್ರಧಾನ ಸಂಚಾಲಕ ರಮೇಶ್ ಕೋಟ್ಯಾನ್, ಡಿಸಿ ಮನ್ನಾ ಭೂಮಿ ಹಂಚಿಕೆಗೆ ಸಂಬಂಧಿಸಿ ಜಿಲ್ಲಾಡಳಿತವು 2017ರಲ್ಲೇ ಸರ್ಕಾರಕ್ಕೆ ಡ್ರಾಫ್ಟ್ ನಿಯಮಾವಳಿಗಳನ್ನು ಕಳುಹಿಸಿತ್ತು. ಆದರೆ, ಇದುವರೆಗೆ ಭೂ ಮಂಜೂರಾತಿ ನಿಯಮಾವಳಿಗೆ ತಿದ್ದುಪಡಿ ತಂದು ಭೂಮಿ ಹಂಚಿಕೆಗೆ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಿದರು.
ಜಿಲ್ಲಾ ಮಟ್ಟದ ಸಭೆಗಳಲ್ಲಿ ನಿರಂತರವಾಗಿ ಒತ್ತಾಯಿಸುವುದರ ಜೊತೆಗೆ ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗಿದ್ದರೂ ಸಮಸ್ಯೆ ಬಗೆಹರಿದಿಲ್ಲ. ಇದೀಗ ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಡಿಸಿ ಮನ್ನಾ ಭೂಮಿ ಹಂಚಿಕೆ ಕುರಿತು ಅಂತಿಮ ನಿರ್ಣಯ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಮಿತಿಯ ಉಪ ಪ್ರಧಾನ ಸಂಚಾಲಕ ರಘು ಕೆ. ಎಕ್ಕಾರು ಮಾತನಾಡಿ, ಸಮಿತಿಯ ನಿಯೋಗ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದು, ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದಾರೆ. 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೂ ಡಿಸಿ ಮನ್ನಾ ಭೂಮಿ ಸಮಸ್ಯೆ ಇತ್ಯರ್ಥದ ಭರವಸೆ ನೀಡಲಾಗಿತ್ತು. ಆದರೆ ಇದುವರೆಗೆ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಹೇಳಿದರು.
ಗ್ರಾಮಾಂತರ ಪ್ರದೇಶದ ಅರ್ಹ ಕುಟುಂಬಗಳಿಗೆ ಕೃಷಿ ಚಟುವಟಿಕೆಗೆ ಅನುಕೂಲವಾಗುವಂತೆ ತಲಾ 2 ಎಕರೆ ಭೂಮಿ ಹಾಗೂ ನಗರ ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ ಕನಿಷ್ಠ 10 ಸೆಂಟ್ಸ್ ಜಮೀನು ಒದಗಿಸಬೇಕು. ಮುಂದಿನ ಆರು ತಿಂಗಳೊಳಗೆ ಅರ್ಹ ಫಲಾನುಭವಿಗಳಿಗೆ ಡಿಸಿ ಮನ್ನಾ ಭೂಮಿ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ಡಿಸಿ ಮನ್ನಾ ಭೂಮಿಯ ಒತ್ತುವರಿ ತೆರವುಗೊಳಿಸಲು ಕ್ರಿಯಾಪಡೆ ಸಮಿತಿ ರಚಿಸಿ, ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಮುಖಂಡರನ್ನು ಸೇರ್ಪಡೆಗೊಳಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳು ಹಾಗೂ ದಲಿತ ಮುಖಂಡರ ಪ್ರತ್ಯೇಕ ಸಭೆ ನಡೆಸಬೇಕು ಎಂದು ಆಗ್ರಹಿಸಿದರು.
2017ರಲ್ಲಿ ಕಂದಾಯ ಅಧಿಕಾರಿಗಳು ನಡೆಸಿದ ಡಿಸಿ ಮನ್ನಾ ಭೂಮಿ ಸರ್ವೆ ವರದಿಯಲ್ಲಿ ಹಲವು ತಪ್ಪುಗಳಿದ್ದು, ಅಡಂಗಲ್ ಆಧಾರದ ಮೇಲೆ ಮತ್ತೊಮ್ಮೆ ಮಾಹಿತಿ ಸಂಗ್ರಹಿಸಿ ನಿಖರ ವರದಿ ಸಿದ್ಧಪಡಿಸಬೇಕು. 2024ರಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಡಿಸಿ ಮನ್ನಾ ಜಮೀನುಗಳಿಗೆ ಸಂಬಂಧಿಸಿ ಹೊರಡಿಸಿರುವ ಆದೇಶವನ್ನು ಜಿಲ್ಲಾ ಮಟ್ಟದಲ್ಲಿ ಜಾರಿಗೊಳಿಸಬೇಕು ಎಂದು ಹೇಳಿದರು.

ಅಲ್ಲದೆ, ಸರ್ಕಾರಿ ಭೂಮಿಯ ಲಭ್ಯತಾ ಪಟ್ಟಿಯನ್ನು ಸಿದ್ಧಪಡಿಸಿ ಪರಿಶಿಷ್ಟ ಸಮುದಾಯಕ್ಕೆ ಶೇ.50ರಷ್ಟು ಭೂಮಿ ಒದಗಿಸಲು ಕ್ರಮ ಕೈಗೊಳ್ಳಬೇಕು. ನಗರ ಪಾಲಿಕೆ, ನಗರಸಭೆ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಭೂ ಮಂಜೂರಾತಿಗೆ ವಿಧಿಸಿರುವ ಮಾನದಂಡಗಳನ್ನು ರದ್ದುಗೊಳಿಸಬೇಕು ಎಂಬ ಬೇಡಿಕೆಗಳನ್ನು ಸಚಿವ ಸಂಪುಟ ಸಭೆಯಲ್ಲಿ ಇತ್ಯರ್ಥಪಡಿಸಬೇಕು ಎಂದು ರಘು ಎಕ್ಕಾರು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಆನಂದ ಬೆಳ್ಳಾರೆ, ಚಂದ್ರಕುಮಾರ್, ಗಿರೀಶ್ ಕುಮಾರ್ ಯು.ಕೆ., ಕೃಷ್ಣಾನಂದ ಡಿ., ಸರೋಜಿನಿ ಬಂಟ್ವಾಳ, ಸದಾಶಿವ ಪಡುಬಿದ್ರಿ, ಸೇಸಪ್ಪ ಬೆದ್ರಕಾಡು, ದಿನೇಶ್ ಮೂಳೂರು, ಸಂಜೀವ ಆರ್. ಬೆಳ್ತಂಗಡಿ, ಚೆನ್ನಕೇಶವ ಮತ್ತಿತರರು ಉಪಸ್ಥಿತರಿದ್ದರು.

ಒಂದು ತಿಂಗಳೊಳಗೆ ಅಂಬೇಡ್ಕರ್ ವೃತ್ತ ಕಾಮಗಾರಿ ಆರಂಭಿಸಿ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಹಲವು ವೃತ್ತಗಳು ನಿರ್ಮಾಣವಾಗಿವೆ. ಆದರೆ, ದಲಿತರು ಹಲವು ವರ್ಷಗಳಿಂದ ಒತ್ತಾಯಿಸುತ್ತಿರುವ ಅಂಬೇಡ್ಕರ್ ವೃತ್ತ ನಿರ್ಮಾಣಕ್ಕೆ ಆಡಳಿತ ವರ್ಗ ಹಾಗೂ ಸರ್ಕಾರ ಮುಂದಾಗುತ್ತಿಲ್ಲ ಎಂದು ಮುಖಂಡರಾದ ಎಸ್.ಪಿ. ಆನಂದ ಹಾಗೂ ಜಗದೀಶ್ ಪಾಂಡೇಶ್ವರ ಆರೋಪಿಸಿದರು.
ಅಂಬೇಡ್ಕರ್ ವೃತ್ತ ನಿರ್ಮಾಣಕ್ಕೆ ಈಗಾಗಲೇ ಶಿಲಾನ್ಯಾಸ ನಡೆದಿದ್ದರೂ, ಸಂಚಾರ ಸಮಸ್ಯೆಯ ನೆಪವೊಡ್ಡಿ ಕಾಮಗಾರಿಯನ್ನು ವಿಳಂಬ ಮಾಡಲಾಗುತ್ತಿದೆ. ಸಂಚಾರ ವ್ಯವಸ್ಥೆಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಯೋಜನೆ ರೂಪಿಸಿ, ಒಂದು ತಿಂಗಳೊಳಗೆ ಅಂಬೇಡ್ಕರ್ ವೃತ್ತ ನಿರ್ಮಾಣ ಕಾಮಗಾರಿ ಆರಂಭಿಸಬೇಕು ಎಂದು ಅವರು ಒತ್ತಾಯಿಸಿದರು.

