ಮಂಗಳೂರು, ದಕ್ಷಿಣ ಕನ್ನಡ:ಕರಾವಳಿ ಭಾಗದ ಅಭಿವೃದ್ಧಿಗೆ ಹೊಸ ರೂಪ ನೀಡುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಪಡೀಲಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಆವರಣದ ಪ್ರಜಾಸೌಧದ ಎರಡನೇ ಮಹಡಿಯಲ್ಲಿ ಸಚಿವ ಸಂಪುಟ ಸಭೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಬೆಳಿಗ್ಗೆ ಸುಮಾರು 11 ಗಂಟೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಲಿದೆ. ಸಭೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.

ತುಳು ಭಾಷೆಗೆ ಸ್ಥಾನಮಾನ?
ತುಳು ಭಾಷೆಗೆ ಎರಡನೇ ಹೆಚ್ಚುವರಿ ರಾಜ್ಯ ಭಾಷೆ ಸ್ಥಾನಮಾನ ನೀಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ನಿರೀಕ್ಷೆಯಿದೆ. ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆ ಹೆಸರನ್ನು ‘ಮಂಗಳೂರು ಜಿಲ್ಲೆ’ ಎಂದು ಬದಲಾಯಿಸುವ ಪ್ರಸ್ತಾವನೆಯ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.

ಕರಾವಳಿ ಪ್ರವಾಸೋದ್ಯಮಕ್ಕೆ ಒತ್ತು
ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಸಿಆರ್ಝಡ್ ನಿಯಮಗಳ ಸಡಿಲಿಕೆ ಸೇರಿದಂತೆ ಹಲವು ಕ್ರಮಗಳ ಘೋಷಣೆಯ ನಿರೀಕ್ಷೆಯಿದೆ. ಟೆಂಪಲ್ ಟೂರಿಸಂ, ಮೀನುಗಾರಿಕೆ ಬಂದರುಗಳ ಅಭಿವೃದ್ಧಿಗೂ ಸರ್ಕಾರ ಆದ್ಯತೆ ನೀಡುವ ಸಾಧ್ಯತೆಯಿದೆ.
ಮಂಗಳೂರಿಗೆ ಮೆಗಾ ಪ್ಯಾಕೇಜ್ ನಿರೀಕ್ಷೆ
ಮಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ ಸುಮಾರು 5,000 ಕೋಟಿ ರೂಪಾಯಿಗಳ ಮೆಗಾ ಪ್ಯಾಕೇಜ್ ಘೋಷಣೆಯಾಗುವ ನಿರೀಕ್ಷೆಯಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರಿಡುವ ಕುರಿತು ಘೋಷಣೆ ಮಾಡುವ ಸಾಧ್ಯತೆಯೂ ಇದೆ.

ಇದರ ಜೊತೆಗೆ ಮಂಗಳೂರಿನಲ್ಲಿ ಮೆಡಿಕಲ್ ಟೂರಿಸಂ ಹಬ್ ಹಾಗೂ ಕರಾವಳಿ ಭಾಗದಲ್ಲಿ ಐಟಿ ಪಾರ್ಕ್ ಸ್ಥಾಪನೆ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳ ಬಗ್ಗೆ ಸರ್ಕಾರದ ಘೋಷಣೆಗಳ ನಿರೀಕ್ಷೆಯಿದೆ.
ಸಂಪುಟ ಸಭೆಗೂ ಮುನ್ನ ರೋಡ್ ಶೋ
ಸಚಿವ ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿ ಹಾಗೂ ಸಚಿವರು ತೆರೆದ ಡಬಲ್ ಡೆಕ್ಕರ್ ‘ಅಂಬಾರಿ’ ಬಸ್ನಲ್ಲಿ ಸುಮಾರು 5 ಕಿಲೋಮೀಟರ್ ರೋಡ್ ಶೋ ನಡೆಸಲಿದ್ದಾರೆ. ‘ಟೀಂ ಡಿಕೆಶಿ’ಯ ಈ ರೋಡ್ ಶೋಗೆ ಮಂಗಳೂರಿನಲ್ಲಿ ಸಿದ್ಧತೆ ನಡೆದಿದೆ.
ಒಟ್ಟಿನಲ್ಲಿ, ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆ ಕರಾವಳಿ ಭಾಗದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ನಿರೀಕ್ಷೆಗಳನ್ನು ಹುಟ್ಟುಹಾಕಿದ್ದು, ಸಭೆಯ ಬಳಿಕ ಯಾವೆಲ್ಲಾ ಮಹತ್ವದ ಘೋಷಣೆಗಳು ಹೊರಬೀಳಲಿವೆ ಎಂಬ ಕುತೂಹಲ ಮೂಡಿಸಿದೆ.

