ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಸೆ.20ರಂದು ಹುಟ್ಟೂರ ಅಭಿನಂದನೆ

ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಮೈನೂರು ವಿಭಾಗದ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹಾಗೂ ಎನ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಸೆ.20ರಂದು ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಹುಟ್ಟೂರ ಅಭಿನಂದನಾ ಸಮಾರಂಭ ನಡೆಯಲಿದೆ.

ಊರ ನಾಗರಿಕರ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ ಶ್ರೀ ರಾಮನಗರ ಶ್ರೀ ಅಯ್ಯಪ್ಪ ಭಜನಾ ಮಂದಿರದ ವಠಾರದಿಂದ ತೆರೆದ ಜೀಪಿನಲ್ಲಿ ಭವ್ಯ ಮೆರವಣಿಗೆ ಮೂಲಕ ಶಶಿಕುಮಾರ್ ರೈ ಬಾಲ್ಯೊಟ್ಟು ಅವರನ್ನು ಸ್ವಾಗತಿಸಲಾಗುವುದು ಎಂದು ಸಮಿತಿ ತಿಳಿಸಿದೆ.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದು, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ದೀಪ ಪ್ರಜ್ವಲನೆ ನೆರವೇರಿಸಲಿದ್ದಾರೆ. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅಭಿನಂದನಾ ಮಾತುಗಳನ್ನಾಡಲಿದ್ದು, ಕೋಟ ಶ್ರೀನಿವಾಸ ಪೂಜಾರಿ ಅಭಿನಂದನೆ ಸಲ್ಲಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟಾಡಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಸಹಕಾರಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್‌ನ ನಿರ್ದೇಶಕ ಹಾಗೂ ಉಪಾಧ್ಯಕ್ಷರಾಗಿ, ಪುತ್ತೂರು ಸೌಹಾರ್ದ ಸಹಕಾರಿಯ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. 2024ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಅವರು, 2025ರಲ್ಲಿ ಯೂನಿಯನ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 18 ಮತಗಳನ್ನು ಪಡೆದು ಗೆಲುವು ಸಾಧಿಸಿರುವ ಅವರು, ಮಹಾಮಂಡಳದ 62 ವರ್ಷಗಳ ಇತಿಹಾಸದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾದ ಮೊದಲ ನಿರ್ದೇಶಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಸಹಕಾರಿ ಕ್ಷೇತ್ರದ ಜೊತೆಗೆ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲೂ ಸಕ್ರಿಯರಾಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ವಿವಿಧ ಸಂಘ-ಸಂಸ್ಥೆಗಳಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ಪ್ರಸ್ತುತ ಇರ್ದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಜೀರ್ಣೋದ್ಧಾರ ಕಾರ್ಯಗಳನ್ನು ಮುನ್ನಡೆಸುತ್ತಿದ್ದಾರೆ.

SHARE
Loading spinner

One thought on “ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಸೆ.20ರಂದು ಹುಟ್ಟೂರ ಅಭಿನಂದನೆ

Leave a Reply

Your email address will not be published. Required fields are marked *

error: Content is protected !!