ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ಹಲವು ಮಹತ್ವದ ಯೋಜನೆಗಳಿಗೆ ಅನುಮೋದನೆ ನೀಡಿರುವುದಕ್ಕೆ ಕರ್ನಾಟಕ ರಾಜ್ಯ ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು.

ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮ, ಆರೋಗ್ಯ, ಮೀನುಗಾರಿಕೆ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಿರುವುದು ಸ್ವಾಗತಾರ್ಹ ಎಂದರು.

ಮಂಗಳೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಹಾಗೂ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ನೂತನ ವಿಭಾಗಗಳ ಸ್ಥಾಪನೆಗೆ ಕೈಗೊಂಡಿರುವ ನಿರ್ಧಾರವು ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯಾಗಿದೆ. ಮೂಡುಶೆಡ್ಡೆಯಲ್ಲಿ ಜಯದೇವ ಆಸ್ಪತ್ರೆ ಸ್ಥಾಪನೆ ಸೇರಿದಂತೆ ಹಲವು ಯೋಜನೆಗಳು ಜಿಲ್ಲೆಯ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಸಹಕಾರಿಯಾಗಲಿವೆ ಎಂದು ಹೇಳಿದರು.

ಕದ್ರಿ ಪಾರ್ಕ್ ಸಮೀಪ ಸುಮಾರು ಐದು ಎಕರೆ ಪ್ರದೇಶದಲ್ಲಿ 200 ಮೀಟರ್ ಎತ್ತರದ ಆಕರ್ಷಕ ಪ್ರವಾಸೋದ್ಯಮ ಯೋಜನೆ ರೂಪಿಸಲು ನಿರ್ಧರಿಸಿರುವುದು ಮಂಗಳೂರಿನ ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ಆಯಾಮ ನೀಡಲಿದೆ. ಈ ಯೋಜನೆಯು ಮಂಗಳೂರನ್ನು ವಿಶ್ವಮಟ್ಟದ ಪ್ರವಾಸಿ ತಾಣವನ್ನಾಗಿ ಬೆಳೆಸುವ ನಿಟ್ಟಿನಲ್ಲಿ ಮಹತ್ವದ ಕೊಡುಗೆ ನೀಡಲಿದೆ ಎಂದರು.
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವಾಗಿವೆ. ಜನಸಾಮಾನ್ಯರು, ಬಡವರು ಹಾಗೂ ವಿದ್ಯಾವಂತರ ಅನುಕೂಲಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ವಿವಿಧ ಜನಪರ ಯೋಜನೆಗಳನ್ನು ಪರಿಗಣಿಸಬೇಕು ಎಂದು ಅವರು ಹೇಳಿದರು.

ಸರ್ವಧರ್ಮಗಳ ಅಭಿವೃದ್ಧಿಗೆ ಒತ್ತು
ಅಲ್ಪಸಂಖ್ಯಾತರಿಗೆ ಮಾತ್ರ ಸರ್ಕಾರ ಯೋಜನೆಗಳನ್ನು ನೀಡುತ್ತಿದೆ ಎಂಬ ಅಪಪ್ರಚಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮಾಡಲಾಗುತ್ತಿದೆ. ಆದರೆ ಕಾಂಗ್ರೆಸ್ ಸರ್ಕಾರ ಜಾತಿ, ಧರ್ಮದ ಭೇದವಿಲ್ಲದೆ ಎಲ್ಲರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ದೇವಾಲಯ, ಮಸೀದಿ, ಚರ್ಚ್ ಸೇರಿದಂತೆ ವಿವಿಧ ಧಾರ್ಮಿಕ ಸಂಸ್ಥೆಗಳಿಗೆ ಅಗತ್ಯ ಅನುದಾನ ಹಾಗೂ ಸೌಲಭ್ಯಗಳನ್ನು ಒದಗಿಸುವ ಮೂಲಕ ಸರ್ವಧರ್ಮಗಳ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡುತ್ತಿದೆ ಎಂದು ಮಮತಾ ಗಟ್ಟಿ ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹ ಐತಿಹಾಸಿಕ ನಿರ್ಧಾರಗಳನ್ನು ಕೈಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಸರ್ಕಾರಕ್ಕೆ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಅವರು ಹೇಳಿದರು.

ಜಿಲ್ಲೆಯ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರ ಪ್ರಯತ್ನ ಮತ್ತು ಮುತುವರ್ಜಿಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಹಲವು ಮಹತ್ವದ ಯೋಜನೆಗಳು ದೊರೆತಿವೆ. ಈ ನಿಟ್ಟಿನಲ್ಲಿ ಸಚಿವರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಮಮತಾ ಗಟ್ಟಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಇದರ ಪ್ರಮುಖರಾದ
ಸುರೇಖಾ ಚಂದ್ರಹಾಸ, , ಸ್ವರೂಪ ಶೆಟ್ಟಿ, ಅಮಿತ ಅಶ್ವಿನಿ, ಗೀತಾ ಅತ್ತಾವರ, ವೃoದ ಪೂಜಾರಿ, ಚಂದ್ರಕಲಾ ಜೋಗಿ, ಶಾಂತಲಾ ಗಟ್ಟಿ, ಚಂದ್ರಕಲಾ ಡಿ ರಾವ್ ಉಪಸ್ತಿತರಿದ್ದರು.

