ಮಂಗಳೂರು: ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಡಿಸಿ ಮನ್ನಾ ಭೂಮಿ ಹಂಚಿಕೆಯ ಸಮಸ್ಯೆ ಬಗೆಹರಿಸುವ ನಿರೀಕ್ಷೆ ಹುಸಿಯಾಗಿದೆ ಎಂದು ಆರೋಪಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕೂಡಲೇ ಸಮಸ್ಯೆ ಪರಿಹರಿಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸುವುದಾಗಿ ಸಮಿತಿ ಎಚ್ಚರಿಕೆ ನೀಡಿದೆ.

ಮಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಮನ್ವಯ ಸಮಿತಿಯ ಮುಖಂಡ ರಘು ಕೆ. ಎಕ್ಕಾರು, ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿ ಡಿಸಿ ಮನ್ನಾ ಭೂಮಿ ಹಂಚಿಕೆಯಲ್ಲಿನ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲಾಗಿತ್ತು. ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲೇ ಈ ಸಮಸ್ಯೆಯನ್ನು ಬಗೆಹರಿಸುವುದಾಗಿ ಸಚಿವರು ಭರವಸೆ ನೀಡಿದ್ದರು. ಆದರೆ ಸಂಪುಟ ಸಭೆ ಮುಗಿದರೂ ನೀಡಿದ್ದ ಭರವಸೆ ಈಡೇರಿಲ್ಲ. ಇದು ದಲಿತ ಸಮುದಾಯಕ್ಕೆ ಮಾಡಿರುವ ದ್ರೋಹವಾಗಿದೆ ಎಂದು ಆರೋಪಿಸಿದರು.

ಕಳೆದ 30 ವರ್ಷಗಳಿಂದ ಡಿಸಿ ಮನ್ನಾ ಭೂಮಿ ಹಂಚಿಕೆಯಲ್ಲಿನ ನ್ಯೂನ್ಯತೆಗಳನ್ನು ಸರಿಪಡಿಸುವಂತೆ ದಲಿತ ಸಂಘಟನೆಗಳು ನಿರಂತರವಾಗಿ ಹೋರಾಟ ನಡೆಸುತ್ತಿವೆ. ಪ್ರತಿ ಬಾರಿ ಜಿಲ್ಲಾಧಿಕಾರಿ ನೇತೃತ್ವದ ಸಭೆಗಳಲ್ಲಿ ಈ ವಿಚಾರ ಪ್ರಸ್ತಾಪವಾದಾಗ ‘ಕರಡು ನಿಯಮ 2017’ ತಿದ್ದುಪಡಿಯ ನೆಪ ಹೇಳಲಾಗುತ್ತಿದೆ. ಆದರೆ ಭೂಮಿ ಹಂಚಿಕೆ ವಿಚಾರದಲ್ಲಿ ಸಚಿವರು ಹಾಗೂ ಜನಪ್ರತಿನಿಧಿಗಳು ಅಗತ್ಯ ಇಚ್ಛಾಶಕ್ತಿ ತೋರುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಕರಾವಳಿ ಅಭಿವೃದ್ಧಿ, ಧಾರ್ಮಿಕ ಕ್ಷೇತ್ರಗಳು ಹಾಗೂ ಬಂಡವಾಳಶಾಹಿ ಯೋಜನೆಗಳಿಗೆ ಕೋಟ್ಯಂತರ ರೂಪಾಯಿ ಅನುದಾನ ನೀಡುವ ಸರ್ಕಾರ, ದಲಿತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ದಲಿತರನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ದಲಿತ ಸಮುದಾಯದ ಶಕ್ತಿಯನ್ನು ಸರ್ಕಾರಕ್ಕೆ ತೋರಿಸಲಾಗುವುದು ಎಂದು ರಘು ಕೆ. ಎಕ್ಕಾರು ಎಚ್ಚರಿಸಿದರು.

ಸಮನ್ವಯ ಸಮಿತಿಯ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಮಾತನಾಡಿ, ಡಿಸಿ ಮನ್ನಾ ಭೂಮಿ ಹಂಚಿಕೆ ವಿಚಾರ ಸಚಿವ ಸಂಪುಟದ ಅಜೆಂಡಾದಿಂದ ಕೈತಪ್ಪಲು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರೇ ಕಾರಣ ಎಂದು ಆರೋಪಿಸಿದರು. ಕಳೆದ ಒಂಭತ್ತು ವರ್ಷಗಳಿಂದಲೂ ಈ ವಿಚಾರದಲ್ಲಿ ಸುಳ್ಳು ಭರವಸೆ ನೀಡಲಾಗುತ್ತಿದೆ. ದಲಿತರ ಭೂಮಿಯನ್ನು ಕಬಳಿಸಿರುವ ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸುವ ಉದ್ದೇಶದಿಂದಲೇ ಈ ವಿಚಾರವನ್ನು ನಿರ್ಲಕ್ಷಿಸಲಾಗುತ್ತಿದೆಯೇ ಎಂಬ ಅನುಮಾನ ಮೂಡುತ್ತಿದೆ ಎಂದರು.

ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಭಾಗವಹಿಸುವ ಸಾರ್ವಜನಿಕ ಕಾರ್ಯಕ್ರಮಗಳನ್ನು ಬಹಿಷ್ಕರಿಸುವುದು, ಜನಾಭಿಪ್ರಾಯ ಮೂಡಿಸುವುದು, ಭಿತ್ತಿಪತ್ರ ಚಳವಳಿ, ಪಾದಯಾತ್ರೆ ಹಾಗೂ ಪ್ರತಿಭಟನೆಗಳ ಮೂಲಕ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಅಶೋಕ್ ಕೊಂಚಾಡಿ ತಿಳಿಸಿದರು. ಕೇವಲ ಬೆನ್ನುತಟ್ಟಿ ಭರವಸೆ ನೀಡುವ ಮೂಲಕ ದಲಿತ ಸಮುದಾಯವನ್ನು ವಂಚಿಸುವ ಕೆಲಸ ನಡೆಯುತ್ತಿದೆ. ಕಳೆದ ಚುನಾವಣೆಯಲ್ಲಿ ಜನಪರ ಕಾಳಜಿಯ ಉದ್ದೇಶದಿಂದ ದಲಿತರು ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರು. ತಮ್ಮ ಬೇಡಿಕೆಗಳ ಬಗ್ಗೆ ಇದೇ ರೀತಿಯ ನಿರ್ಲಕ್ಷ್ಯ ಮುಂದುವರಿದರೆ ಮುಂದಿನ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುವುದಾಗಿ ಅವರು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಸಮನ್ವಯ ಸಮಿತಿಯ ಮುಖಂಡರಾದ ಎಸ್.ಪಿ. ಆನಂದ, ರಮೇಶ್ ಕೋಟ್ಯಾನ್, ಚಂದ್ರಕುಮಾರ್, ಗಿರೀಶ್ ಕುಮಾರ್, ರೋಹಿತ್ ಉಳ್ಳಾಲ್, ಕೃಷ್ಣಾನಂದ ಡಿ., ಜಗದೀಶ್ ಪಾಂಡೇಶ್ವರ, ಸರೋಜಿನಿ ಬಂಟ್ವಾಳ, ಯಶೋದ ಹೊಸಬೆಟ್ಟು, ರಮೇಶ್ ಕಾವೂರು ಹಾಗೂ ಸಂಜೀವ ಆರ್. ಬೆಳ್ತಂಗಡಿ ಉಪಸ್ಥಿತರಿದ್ದರು.

