ಕಾಸರಗೋಡು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ಜಾನಪದ ಪರಿಷತ್ತು (ಕಜಾಪ) ಕೇರಳ ಗಡಿನಾಡ ಘಟಕದ ಜಂಟಿ ಆಶ್ರಯದಲ್ಲಿ ಸೆ.27ರಂದು ಕೊಚ್ಚಿಯ ಕಲೂರ್ ಗೋಕುಲಂ ಪಾರ್ಕ್ ಕನ್ವೆನ್ಷನ್ ಸೆಂಟರ್‌ನಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ, ಕಜಾಪ ಪದಾಧಿಕಾರಿಗಳ ಪದಗ್ರಹಣ, ಕೃತಿ ಬಿಡುಗಡೆ, ಕವಿಗೋಷ್ಠಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಮಾಜಿ ಸಚಿವ ಹಾಗೂ ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಜಾನಪದ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ. ಮಾಜಿ ಶಾಸಕ ಹಾಗೂ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ.

ಸಾಧಕ ರತ್ನ ಪ್ರಶಸ್ತಿ ಪ್ರದಾನ
ಕೇರಳ ರಾಜ್ಯದ ಮೀನುಗಾರಿಕೆ ಮತ್ತು ಬಂದರು ಇಲಾಖೆ ಸಚಿವ ವಿ.ಇ. ಅಬ್ದುಲ್ ಗಫೂರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಡಾ. ಶಿವರಾಮ ಕೆ. ಭಂಡಾರಿ, ಪ್ರಸನ್ನ ಕುಮಾರ್, ಡಾ. ಸಂದೀಪ್ ಪುರಂದರ ಶೆಟ್ಟಿ, ಎಸ್. ಜಗದೀಶ್ ಚಂದ್ರ ಅಂಚನ್, ಶಾಫಿ ಎಂ. ಬಂಡಸಾಲೆ ಹಾಗೂ ರಾಘವ ಚೇರಾಲ್ ಅವರಿಗೆ ಸಾಧಕ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು.

ಪದಗ್ರಹಣ ಮತ್ತು ಕೃತಿ ಬಿಡುಗಡೆ
ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಅಧ್ಯಕ್ಷ ಹಾಗೂ ವಿಶ್ರಾಂತ ಕುಲಪತಿ ಪ್ರೊ. ಹಿ.ಚಿ. ಬೋರಲಿಂಗಯ್ಯ ಅವರು ಕಜಾಪ ಕೇರಳ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಸಂಸ್ಥಾಪಕ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಅವರು ಲಕ್ಷ್ಮೀ ಮಹೇಶ್ ರಾಜು ಅವರ ‘ಇಲ್ಲಿ-ಇಂತು-ಹೀಗೆ’ ಕವನ ಸಂಕಲನವನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾಸರಗೋಡು ಸರ್ಕಾರಿ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಹಾಗೂ ಕವಯತ್ರಿ ಲಕ್ಷ್ಮೀ ಕೆ. ಅವರ ಅಧ್ಯಕ್ಷತೆಯಲ್ಲಿ ಬಹುಭಾಷಾ ಕವಿಗೋಷ್ಠಿ ನಡೆಯಲಿದೆ.

ಗಣ್ಯರ ಉಪಸ್ಥಿತಿ
ಕಾರ್ಯಕ್ರಮದಲ್ಲಿ ಎರ್ನಾಕುಳಂ ಶಾಸಕ ಟಿ.ಜೆ. ವಿನೋದ್, ಕಸಾಪ ಕೇರಳ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಎ.ಆರ್. ಸುಬ್ಬಯ್ಯಕಟ್ಟೆ ಹಾಗೂ ಶಿವರೆಡ್ಡಿ ಖ್ಯಾಡೇದ್, ಧಾರ್ಮಿಕ ಮುಂದಾಳು ಅರಿಬೈಲು ಗೋಪಾಲ ಶೆಟ್ಟಿ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಎನ್. ಚನಿಯಪ್ಪ ನಾಯ್ಕ, ಕೊಚ್ಚಿ ಚಂಗಂಪುಝ ಸಾಂಸ್ಕೃತಿಕ ಕೇಂದ್ರದ ಕಾರ್ಯದರ್ಶಿ ಟಿ.ಜಿ. ರವಿಕುಮಾರ್, ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಗಂಗಾಧರ ತೆಕ್ಕೆಮೂಲೆ, ಗಮಕ ಕಲಾ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಟಿ. ಶಂಕರನಾರಾಯಣ ಭಟ್, ಸಾಮಾಜಿಕ ಕಾರ್ಯಕರ್ತರಾದ ಸರಿನ್ ಮೊಹಮ್ಮದ್ ಹಾಗೂ ಸಿದ್ದಿಕ್ ಪಚ್ಚಂಬಳ, ಕಜಾಪ ಕೇರಳ ಘಟಕದ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಎಸ್. ನಾಸಿ, ಪ್ರಧಾನ ಕಾರ್ಯದರ್ಶಿ ರವಿ ನಾಯ್ಕಾಪು, ಖಜಾಂಚಿ ಪೃಥ್ವಿರಾಜ್ ಶೆಟ್ಟಿ ಕುಂಬಳೆ, ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ವಕೀಲ ಎಂ.ಎಸ್. ಥೋಮಸ್ ಡಿಸೋಜ, ಪತ್ರಕರ್ತ ಪುರುಷೋತ್ತಮ ಪೆರ್ಲ ಸೇರಿದಂತೆ ಸಾಂಸ್ಕೃತಿಕ ಹಾಗೂ ಸಾಮಾಜಿಕ ವಲಯದ ಗಣ್ಯರು ಭಾಗವಹಿಸಲಿದ್ದಾರೆ.

ಸಾಂಸ್ಕೃತಿಕ ವೈಭವ
ಜಾನಪದ ಉತ್ಸವದ ಪ್ರಮುಖ ಆಕರ್ಷಣೆಯಾಗಿ ಪೋತ್ತನಿಕ್ಕಾಡ್ ಪೆರುನೀರ್ ಶಿವಶೈಲಂ ತಂಡದವರಿಂದ ಕೇರಳದ ಸಾಂಪ್ರದಾಯಿಕ ನೃತ್ಯ ತಿರುವಾದಿರಕ್ಕಳಿ ಪ್ರದರ್ಶನಗೊಳ್ಳಲಿದೆ. ಬೆಂಗಳೂರಿನ ಡಾ. ಕೆ.ಎನ್. ನಾಗೇಶ್ ಮತ್ತು ತಂಡದಿಂದ ಜಾನಪದ ಗಾಯನ ಕಾರ್ಯಕ್ರಮ ನಡೆಯಲಿದೆ. ಇದರೊಂದಿಗೆ ಗಡಿನಾಡಿನ ವಿವಿಧ ಸಾಂಸ್ಕೃತಿಕ ತಂಡಗಳಿಂದ ವೈವಿಧ್ಯಮಯ ಕಲಾ ಪ್ರದರ್ಶನಗಳು ಜರುಗಲಿವೆ ಎಂದು ಸಂಘಟಕರು ತಿಳಿಸಿದ್ದಾರೆ.

