ಮಂಗಳೂರು: ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಮೃತಪಟ್ಟ ಮನೀಷ್ ಕರ್ಕಡ ಅವರ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡಬೇಕು ಹಾಗೂ ಸಂಸ್ಥೆಯಲ್ಲಿ ದುಡಿಯುತ್ತಿರುವ ಕಾರ್ಮಿಕರ ಕುಟುಂಬಗಳಿಗೆ ಆರೋಗ್ಯ ವಿಮೆ ಕಲ್ಪಿಸಬೇಕು ಎಂದು ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಧರಣಿ ನಡೆಸಿದವು.


ಎಂಆರ್‌ಪಿಎಲ್–ಒಎನ್‌ಜಿಸಿ ಕರ್ಮಚಾರಿ ಸಂಘ ಮತ್ತು ಎಂಆರ್‌ಪಿಎಲ್ ಲೇಬರ್ ಯೂನಿಯನ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಮಿಕರು ಸಂಸ್ಥೆಯ ಮುಖ್ಯದ್ವಾರದ ಬಳಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.
ಎಂಆರ್‌ಪಿಎಲ್‌ನಲ್ಲಿ ವಿವಿಧ ಸಂದರ್ಭಗಳಲ್ಲಿ ಸಂಭವಿಸಿರುವ ಸಾವು-ನೋವುಗಳ ಕುರಿತು ಸಮಗ್ರ ತನಿಖೆ ನಡೆಸಬೇಕು. ಕಾರ್ಮಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವುದರ ಜತೆಗೆ, ಸಂಸ್ಥೆಯಲ್ಲಿ ದುಡಿಯುವ ಕಾರ್ಮಿಕರ ಕುಟುಂಬಗಳಿಗೆ ತಲಾ ₹5 ಲಕ್ಷದವರೆಗೆ ಆರೋಗ್ಯ ವಿಮೆ ಸೌಲಭ್ಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸ್ಫೋಟದಲ್ಲಿ ಮೃತಪಟ್ಟ ಮನೀಷ್ ಕರ್ಕಡ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ನೀಡಬೇಕು ಎಂದು ಆಗ್ರಹಿಸಿದ ಕಾರ್ಮಿಕ ಸಂಘಟನೆಗಳು, ಮುಂದಿನ ದಿನಗಳಲ್ಲಿ ಇಂತಹ ಅವಘಡಗಳು ಮರುಕಳಿಸದಂತೆ ಸುರಕ್ಷತಾ ಕ್ರಮಗಳನ್ನು ಬಲಪಡಿಸುವಂತೆ ಒತ್ತಾಯಿಸಿದವು.

