ಜೂನ್‌ನಿಂದ ಬಿಸಿಯೂಟ ನೌಕರರಿಗೆ ಗೌರವಧನ ಬಾಕಿ: ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು, ಅ.5: 2026ರ ಜೂನ್ ತಿಂಗಳಿನಿಂದ ಸರಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಅನುದಾನಿತ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಮತ್ತು ಬಡಿಸುವ ನೌಕರರಿಗೆ ಮಾಸಿಕ ಗೌರವಧನ ಪಾವತಿಯಾಗದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸೋಮವಾರ ಮಂಗಳೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

2026ರ ಸೆಪ್ಟೆಂಬರ್ 8ರಂದು ಬೆಂಗಳೂರಿನಲ್ಲಿ ನಡೆದ ‘ಬೆಂಗಳೂರು ಚಲೋ’ ಕಾರ್ಯಕ್ರಮದ ಸಂದರ್ಭದಲ್ಲಿ ಅಧಿಕಾರಿಗಳು ನೀಡಿದ್ದ ಭರವಸೆಯಂತೆ ಗೌರವಧನ ಬಿಡುಗಡೆಗೆ ಸಂಬಂಧಿಸಿದಂತೆ ಲಿಖಿತ ಸುತ್ತೋಲೆ ಹೊರಡಿಸಲಾಗಿದೆ. ಆದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಬಿಸಿಯೂಟ ನೌಕರರಿಗೆ ಗೌರವಧನ ಪಾವತಿಯಾಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಜೂನ್‌ನಿಂದ ಗೌರವಧನ ಪಾವತಿಯಾಗದೆ ಇರುವುದರಿಂದ ನೌಕರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಸಾಲ ಮಾಡಿ ಜೀವನ ಸಾಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಹಲವು ರಾಷ್ಟ್ರೀಯ ಹಬ್ಬಗಳು ಹಾಗೂ ನಾಡಹಬ್ಬಗಳು ಕಳೆದರೂ ಗೌರವಧನ ಪಾವತಿಯಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಬಾಕಿ ಇರುವ ಗೌರವಧನವನ್ನು ಕೂಡಲೇ ಪಾವತಿಸುವಂತೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ತಕ್ಷಣ ಗೌರವಧನ ಪಾವತಿಸದಿದ್ದರೆ ಸಂಬಂಧಪಟ್ಟ ಕಚೇರಿ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಬಿಸಿಯೂಟ ನೌಕರರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿಯ ಗೌರವಾಧ್ಯಕ್ಷೆ ಪದ್ಮಾವತಿ ಶೆಟ್ಟಿ, ಅಧ್ಯಕ್ಷೆ ಭವ್ಯ, ಪ್ರಧಾನ ಕಾರ್ಯದರ್ಶಿ ಗಿರಿಜಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!