ಮಂಗಳೂರು: ಕಡಲ ತೀರದ ಭಾರ್ಗವ, ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ 123ನೇ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದಿಂದ ನೀಡಲಾಗುವ ‘ಕಾರಂತ ಪ್ರಶಸ್ತಿ-2026’ಕ್ಕೆ ಹಿರಿಯ ಸಾಹಿತಿ, ಕಾದಂಬರಿಗಾರ್ತಿ ವೈದೇಹಿ ಆಯ್ಕೆಯಾಗಿದ್ದಾರೆ. ಅ.10ರಂದು ಮಂಗಳೂರಿನ ಪತ್ತುಮುಡಿ ಸೌಧದ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕಾರಂತ ಸಮಿತಿ ಪರವಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಹಾಗೂ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ತಿಳಿಸಿದ್ದಾರೆ.
ಅ.10ರಂದು ಬೆಳಗ್ಗೆ 9.30ಕ್ಕೆ ದಿವಂಗತ ಪತ್ತುಮುಡಿ ಸೂರ್ಯನಾರಾಯಣ ರಾವ್ ಸಂಸ್ಮರಣೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಹಂಪಿ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿ ಪ್ರೊ. ಬಿ.ಎ. ವಿವೇಕ ರೈ ಅವರು ಕಾರಂತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರಂತ ಸಂಸ್ಮರಣೆ ಮಾಡಲಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಪಿ.ಎಲ್. ಧರ್ಮ ಅವರು ವೈದೇಹಿ ಅವರಿಗೆ ಕಾರಂತ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಶಾಸಕ ಡಿ. ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಪ್ರಧಾನ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಕರಾವಳಿ ಲೇಖಕಿಯರ ಸಂಘದ ಅಧ್ಯಕ್ಷೆ ಶಕುಂತಳಾ ಟಿ. ಶೆಟ್ಟಿ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು, ಶಾರದಾ ವಿದ್ಯಾಲಯ ಸಮೂಹದ ಅಧ್ಯಕ್ಷ ಡಾ. ಎಂ.ಬಿ. ಪುರಾಣಿಕ್ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿರುವರು.

ವಿವಿಧ ಪ್ರಶಸ್ತಿ, ಬಹುಮಾನ ಪ್ರದಾನ
ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಹಿರಿಯ ಸಾಹಿತಿ ಭುವನೇಶ್ವರಿ ಹೆಗ್ಡೆ ಬಹುಮಾನ ವಿತರಿಸಲಿದ್ದಾರೆ. ಅಂಚೆಕಾರ್ಡ್‌ನಲ್ಲಿ ಕಾರಂತರ ಚಿತ್ರರಚನಾ ಸ್ಪರ್ಧೆಯ ವಿಜೇತರಿಗೆ ಕರ್ನಾಟಕ ಬ್ಯಾಂಕ್‌ನ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಎಸ್. ಭಟ್ ಬಹುಮಾನ ವಿತರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವಾರ್ಪಣೆ ನಡೆಯಲಿದೆ.

ವೈದೇಹಿ ಪರಿಚಯ
‘ವೈದೇಹಿ’ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ಹಿರಿಯ ಲೇಖಕಿ, ಕಾದಂಬರಿಗಾರ್ತಿ ಜಾನಕಿ ಶ್ರೀನಿವಾಸಮೂರ್ತಿ ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರದವರು. ಇವರ ಮೂಲ ಹೆಸರು ವಾಸಂತಿ. ವಿವಾಹದ ಬಳಿಕ ಜಾನಕಿ ಎಂಬ ಹೆಸರು ಪಡೆದ ಅವರು ‘ನೀರೆಯರ ಮನ’ ಲೇಖನ ಪ್ರಕಟಿಸುವ ಸಂದರ್ಭದಲ್ಲಿ ‘ವೈದೇಹಿ’ ಎಂಬ ಕಾವ್ಯನಾಮವನ್ನು ರೂಢಿಸಿಕೊಂಡರು.
ಕರ್ಮವೀರ, ಮಯೂರ, ಸುಧಾ, ಪ್ರಜಾವಾಣಿ, ಉದಯವಾಣಿ, ಕಸ್ತೂರಿ ಸೇರಿದಂತೆ ಹಲವು ಪ್ರಮುಖ ಪತ್ರಿಕೆಗಳಲ್ಲಿ ಅವರ ಕಥೆ, ಲೇಖನಗಳು ಪ್ರಕಟಗೊಂಡಿವೆ. ಕಥಾ ಸಂಕಲನ, ಕವನ ಸಂಕಲನ, ಮಕ್ಕಳ ಸಾಹಿತ್ಯ, ಪ್ರಬಂಧ, ಅನುವಾದ ಸಾಹಿತ್ಯ ಹಾಗೂ ಕಾದಂಬರಿ ಸೇರಿದಂತೆ ವಿವಿಧ ಪ್ರಕಾರಗಳಲ್ಲಿ ವೈದೇಹಿ ಸಾಹಿತ್ಯ ಕೃಷಿ ಮಾಡಿದ್ದಾರೆ.
ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಎಂ.ಕೆ. ಇಂದಿರಾ ಪ್ರಶಸ್ತಿ, ಅನುಪಮಾ ಪ್ರಶಸ್ತಿ, ಅತ್ತಿಮಬ್ಬೆ ಪ್ರಶಸ್ತಿ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದಾರೆ.

ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ 9.30ರಿಂದ ಸುಗಮ ಸಂಗೀತ ಝೇಂಕಾರ ಬಳಗ, ರಜನಿ ಮಲ್ಯ, ಅದಿತಿ ಗಾಣಿಗ ಹಾಗೂ ರೋಹಿತ್ ಉಪಾಧ್ಯಾಯ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 10ಕ್ಕೆ ಸಭಾ ಕಾರ್ಯಕ್ರಮ ಆರಂಭವಾಗಲಿದ್ದು, ಕಾರಂತ ಸಂಸ್ಮರಣೆ, ಪ್ರಶಸ್ತಿ ಪ್ರದಾನ, ಬಹುಮಾನ ವಿತರಣೆ ಹಾಗೂ ಸಾಧಕರಿಗೆ ಗೌರವಾರ್ಪಣೆ ನಡೆಯಲಿದೆ. ಮಧ್ಯಾಹ್ನ 12ಕ್ಕೆ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ. ಕಾರಂತ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಎಸ್. ಪ್ರದೀಪ ಕುಮಾರ ಕಲ್ಕೂರ ಮನವಿ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಪ್ರಮುಖರಾದ ಎ.ಆರ್. ಸುಬ್ಬಯ್ಯಕಟ್ಟೆ, ಪೊಳಲಿ ನಿತ್ಯಾನಂದ ಕಾರಂತ, ಜಿ.ಕೆ. ಭಟ್ ಸೇರಾಜೆ, ಜನಾರ್ಧನ ಹಂದೆ, ಪೂರ್ಣಿಮಾ ಪೇಜಾವರ, ವಿಜಯಲಕ್ಷ್ಮಿ ಶೆಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


The login process is super quick and the customer support is actually helpful. It is refreshing to find a site this professional. Visit pklucky91login.