ನಕಲಿ ಪಾಸ್‌ಪೋರ್ಟ್ ಪ್ರಕರಣ: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ, ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.

ಬಂಧಿತನನ್ನು 54 ವರ್ಷದ ವೇಲಾಯುಧನ್ ಎಂದು ಗುರುತಿಸಲಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯ ಬೇವಿಂಜೆ ಗ್ರಾಮದ ನಿವಾಸಿಯಾಗಿರುವ ಈತ, 2010ರಲ್ಲಿ ನಕಲಿ ಪಾಸ್‌ಪೋರ್ಟ್ ಬಳಸಿ ವಿದೇಶಕ್ಕೆ ತೆರಳಲು ಯತ್ನಿಸಿದ್ದ ಆರೋಪ ಎದುರಿಸುತ್ತಿದ್ದ.

2010ರ ಜೂನ್ 22ರಂದು, ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ವೇಲಾಯುಧನ್‌ನನ್ನು ವಶಕ್ಕೆ ಪಡೆದು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದರು.

ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 141/2010ರಂತೆ ಐಪಿಸಿ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಪೂರ್ಣಗೊಳಿಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮಾನ್ಯ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ವೇಲಾಯುಧನ್‌ಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.

ನಂತರ ಶಿಕ್ಷೆಯ ವಿರುದ್ಧ ಆರೋಪಿ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಕೂಡ ಆತನ ಮನವಿಯನ್ನು ತಿರಸ್ಕರಿಸಿತ್ತು.

ಹೈಕೋರ್ಟ್ ತೀರ್ಪಿನ ಬಳಿಕ ದಸ್ತಗಿರಿಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ವೇಲಾಯುಧನ್‌ನನ್ನು, 2026ರ ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

SHARE
Loading spinner

One thought on “ನಕಲಿ ಪಾಸ್‌ಪೋರ್ಟ್ ಪ್ರಕರಣ: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ”

Leave a Reply

Your email address will not be published. Required fields are marked *

error: Content is protected !!