ಅ. 26ರೊಳಗೆ ರಾಜಣ್ಣಗೆ ಸಚಿವ ಸ್ಥಾನ ನೀಡಿ: ಅನುಪಮಾ ಶೆಣೈ

ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ, ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ಉಡುಪಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್‌) ಹಾಗೂ ‘ವೋಟ್‌ ಚೋರಿ’ ವಿಚಾರದಲ್ಲಿ ಸತ್ಯ ಮಾತನಾಡಿದ್ದಕ್ಕಾಗಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದು ಮಾಜಿ ಡಿವೈಎಸ್‌ಪಿ ಹಾಗೂ ಸಮಾಜಸೇವಕಿ ಅನುಪಮಾ ಶೆಣೈ ಆರೋಪಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್‌ 26ರ ವಾಲ್ಮೀಕಿ ಜಯಂತಿಯೊಳಗೆ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಮರುನೇಮಕ ಮಾಡಬೇಕು ಎಂದು ಒತ್ತಾಯಿಸಿದರು. ಸರ್ಕಾರ ಈ ಬೇಡಿಕೆಗೆ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸುವುದರ ಜತೆಗೆ ಅಗತ್ಯವಿದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿಯೂ ಎಚ್ಚರಿಕೆ ನೀಡಿದರು.

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ನಡೆಯುತ್ತಿರುವ ಅಕ್ರಮಗಳ ಕುರಿತು ಧ್ವನಿ ಎತ್ತಿದ್ದ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದು ಅನ್ಯಾಯವಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೂತ್‌ ಮಟ್ಟದ ಅಧಿಕಾರಿಗಳು ಹಾಗೂ ಚುನಾವಣಾ ನೋಂದಣಾಧಿಕಾರಿಗಳ ಮೇಲೆ ರಾಜಕೀಯ ಒತ್ತಡ ಹೇರಲಾಗುತ್ತಿದೆ. ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಮರುನೇಮಕ ಮಾಡದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು. ವಾಲ್ಮೀಕಿ ಜಯಂತಿಯನ್ನು ಸರ್ಕಾರದ ವಿರುದ್ಧ ಪ್ರತಿಭಟನೆಯ ದಿನವನ್ನಾಗಿ ಆಚರಿಸಬೇಕು ಎಂದು ಅನುಪಮಾ ಶೆಣೈ ಕರೆ ನೀಡಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!