ಮಂಗಳೂರು: ಬ್ಯಾಂಕ್ ಆಫ್ ಬರೋಡದ ಸಂಯೋಜಿತ ಸಂಸ್ಥೆಯಾದ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ.), ಮಂಗಳೂರಿನ 35ನೇ ವಾರ್ಷಿಕ ಮಹಾಸಭೆಯು ಅಕ್ಟೋಬರ್ 28ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಮಲ್ಲಿಕಟ್ಟೆಯ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ರಾಜೇಂದ್ರ ರೈ ತಿಳಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಜನರ ಸರ್ವತೋಮುಖ ಅಭಿವೃದ್ಧಿ ಹಾಗೂ ಮಹಿಳೆಯರ ಸ್ವಾವಲಂಬನೆಯನ್ನು ಉತ್ತೇಜಿಸುವ ಉದ್ದೇಶದಿಂದ ಪ್ರತಿಷ್ಠಾನವು ಕೃಷಿ, ಸ್ವಯಂ ಉದ್ಯೋಗ, ಶಿಕ್ಷಣ, ಆರೋಗ್ಯ ಮತ್ತು ಪರಿಸರ ಸಂರಕ್ಷಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ತಿಳಿಸಿದರು.
ಮಹಾಸಭೆಯಲ್ಲಿ 2025-26ನೇ ಸಾಲಿನ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಮಂಡಿಸಿ ಅನುಮೋದನೆ ಪಡೆಯಲಾಗುವುದು. ಇದೇ ವೇಳೆ ಲೆಕ್ಕಪರಿಶೋಧಕರ ವರದಿಯನ್ನು ಮಂಡಿಸಿ, ಸಂಬಂಧಿತ ವಿಷಯಗಳ ಕುರಿತು ಚರ್ಚೆ ನಡೆಸಲಾಗುವುದು. ಅಧ್ಯಕ್ಷರ ಅನುಮತಿಯ ಮೇರೆಗೆ ಇತರ ವಿಷಯಗಳನ್ನೂ ಚರ್ಚೆಗೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.

ಪ್ರತಿಷ್ಠಾನದ ವಾರ್ಷಿಕ ಕಾರ್ಯಚಟುವಟಿಕೆಗಳ ಪರಿಶೀಲನೆ ಹಾಗೂ ಮುಂದಿನ ಅಭಿವೃದ್ಧಿ ಕಾರ್ಯಕ್ರಮಗಳ ರೂಪುರೇಷೆ ಸಿದ್ಧಪಡಿಸುವ ನಿಟ್ಟಿನಲ್ಲಿ ಮಹಾಸಭೆ ಮಹತ್ವದ್ದಾಗಿದೆ. ಪ್ರತಿಷ್ಠಾನದ ಎಲ್ಲಾ ಸದಸ್ಯರು ಸಭೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರತಿಷ್ಠಾನದ ಪ್ರಮುಖರಾದ ರವೀಂದ್ರ ಬಲ್ಲಾಳ್, ಗಿರಿಜಾ ಭಂಡಾರಿ ಹಾಗೂ ಜ್ಯೋತಿ ರಾಜ್ ಉಪಸ್ಥಿತರಿದ್ದರು.

