
ಮಂಗಳೂರು: ಎಸ್ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ವಿರುದ್ಧ ದೇಶವ್ಯಾಪಿ ನಡೆಯುತ್ತಿರುವ ‘ಪ್ರಜಾಪ್ರಭುತ್ವ ಮರಳಿ ಪಡೆಯೋಣ, ಅರ್ಹ ಮತದಾರರ ಹಕ್ಕುಗಳನ್ನು ರಕ್ಷಿಸೋಣ’ ಹೋರಾಟದ ಭಾಗವಾಗಿ, ಪ್ರಜಾಪ್ರಭುತ್ವ ಉಳಿಸಿ ಆಂದೋಲನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೇತೃತ್ವದಲ್ಲಿ ಶುಕ್ರವಾರ ನಗರದ ಕ್ಲಾಕ್ ಟವರ್ ಬಳಿ ‘ಜಂತರ್ ಮಂತರ್’ ಹೆಸರಿನಲ್ಲಿ ಧರಣಿ ಸತ್ಯಾಗ್ರಹ ನಡೆಯಿತು.

ಧರಣಿಯನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಸಂವಿಧಾನದ ರಕ್ಷಕರಾಗಿರುವ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಹಾಗೂ ಚುನಾವಣಾ ಆಯೋಗದ ಆಯುಕ್ತರು ಪ್ರಧಾನಿ ಮತ್ತು ಗೃಹ ಸಚಿವರಿಗೆ ತಲೆಬಾಗುತ್ತಿರುವುದು ದುರಂತದ ಸಂಗತಿ. ಇಂತಹ ಸಂದರ್ಭದಲ್ಲಿ ಸಂವಿಧಾನದ ರಕ್ಷಕರಾಗುವ ಜವಾಬ್ದಾರಿ ನಮ್ಮ ಮೇಲಿದೆ. ಆದ್ದರಿಂದ ಎಸ್ಐಆರ್ ವಿರುದ್ಧದ ಹೋರಾಟವನ್ನು ಮುಂದುವರಿಸಬೇಕಿದೆ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಜಾಪ್ರಭುತ್ವ ಉಳಿಸಿ ಆಂದೋಲನದ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ, ನ್ಯಾಯವಾದಿ ವಿನೋದ್ ಮಸ್ಕರೇನ್ಹಸ್, ಎಸ್ಐಆರ್ ವಿರುದ್ಧ ಪ್ರತಿಭಟಿಸಲು ದೆಹಲಿಯ ಜಂತರ್ ಮಂತರ್ಗೆ ತೆರಳುವವರನ್ನು ತಡೆಯಲಾಗುತ್ತಿದೆ. ಹೀಗಾಗಿ ಇದೀಗ ಇಡೀ ದೇಶವೇ ಜಂತರ್ ಮಂತರ್ ಆಗುತ್ತಿದೆ ಎಂದು ಹೇಳಿದರು.

ದೇಶದ 13 ಕೋಟಿಗೂ ಅಧಿಕ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ ಎಂದು ಆರೋಪಿಸಿದ ಅವರು, ಇದಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.

ಧರಣಿಯಲ್ಲಿ ವಿವಿಧ ಪಕ್ಷಗಳು ಮತ್ತು ಸಂಘಟನೆಗಳ ಮುಖಂಡರಾದ ಅಶ್ರಫ್ ಅಡ್ಡೂರು, ಅಥಾವುಲ್ಲಾ ಜೋಕಟ್ಟೆ, ಜಾಫರ್ ಸಾದಿಕ್ ಫೈಝಿ, ಶಾಹಿದಾ ತನ್ನೀಂ, ಅನ್ಸಾರ್ ಬಜಾಲ್, ಮೋಹನ್ ಕೆ.ಇ., ಸಂತೋಷ್ ಡಿಸೋಜ, ಅಮೀನ್ ಅನ್ಸನ್, ಆಯಿಶಾ ಯಾಸ್ಟೀನ್, ಝಾಹಿದ್ ಮಲಾರ್, ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್. ಮತ್ತಿತರರು ಪಾಲ್ಗೊಂಡಿದ್ದರು.
ಪ್ರಜಾಪ್ರಭುತ್ವ ಉಳಿಸಿ ಆಂದೋಲನದ ದಕ್ಷಿಣ ಕನ್ನಡ ಜಿಲ್ಲಾ ಸಹ ಸಂಚಾಲಕ ಅನ್ವರ್ ಸಾದತ್ ಬಜತ್ತೂರು ಸ್ವಾಗತಿಸಿದರು.

