ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಕ್ಕುಗಳಿಗಾಗಿ ಜನಾಂದೋಲನ: ಸತೀಶ್ ಕುಂಪಲ

ಮಂಗಳೂರು:* ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತು ಜನಜಾಗೃತಿ ಮೂಡಿಸುವುದು ಹಾಗೂ ಜನರ ಹಕ್ಕುಗಳ ಪರವಾಗಿ ಹೋರಾಟ ನಡೆಸುವ ಉದ್ದೇಶದಿಂದ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕವು ಅಕ್ಟೋಬರ್‌ 25ರಿಂದ ನವೆಂಬರ್‌ 15ರವರೆಗೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಪಾದಯಾತ್ರೆ ಹಾಗೂ ಪ್ರತಿಭಟನೆಗಳನ್ನು ಆಯೋಜಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ತಿಳಿಸಿದ್ದಾರೆ.

ನಗರದ ಪಿವಿಎಸ್‌ ಬಳಿಯ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು ಒಂದು ಕಿಲೋಮೀಟರ್‌ ಪಾದಯಾತ್ರೆ ನಡೆಸಿದ ಬಳಿಕ ಸಂಬಂಧಪಟ್ಟ ಸ್ಥಳದಲ್ಲೇ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲು ಜಿಲ್ಲಾ ಸಮಿತಿ ನಿರ್ಧರಿಸಿದೆ ಎಂದು ಹೇಳಿದರು.

ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳ ಎದುರು ಪಾದಯಾತ್ರೆ ನಡೆಸಿ, ಜನರ ಸಮಸ್ಯೆಗಳು ಮತ್ತು ಹಕ್ಕುಗಳ ಕುರಿತು ಧ್ವನಿ ಎತ್ತಲಾಗುವುದು. ಜನಪರ ಹೋರಾಟದ ಮೂಲಕ ಕಾಂಗ್ರೆಸ್‌ ಸರ್ಕಾರದ ಆಡಳಿತ ವೈಫಲ್ಯವನ್ನು ಎತ್ತಿತೋರಿಸಲಾಗುವುದು . ಇದಕ್ಕೆ ಅಗತ್ಯ ಸಿದ್ಧತೆಗಳನ್ನು ಜಿಲ್ಲಾ ಸಮಿತಿಯ ಸಭೆಯಲ್ಲಿ ಪದಾಧಿಕಾರಿಗಳ ಸಮ್ಮುಖದಲ್ಲಿ ಚರ್ಚಿಸಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಈ ಜನಾಂದೋಲನದಲ್ಲಿ ಜಿಲ್ಲೆಯ ಸಂಸದರು, ಶಾಸಕರು ಹಾಗೂ ಇತರ ಜನಪ್ರತಿನಿಧಿಗಳು ಭಾಗವಹಿಸಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದ ಅವರು, ಜಿಲ್ಲೆಯಾದ್ಯಂತ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಕ್ಷದ ಎಲ್ಲ ಪದಾಧಿಕಾರಿಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಎಸ್‌ಐಆರ್‌ ಪ್ರಕ್ರಿಯೆ ಕುರಿತು ಕಾಂಗ್ರೆಸ್‌ ನಿರಂತರವಾಗಿ ಆಕ್ಷೇಪ ವ್ಯಕ್ತಪಡಿಸುತ್ತಿದ್ದು, ಮತಗಳ್ಳತನದ ಆರೋಪಗಳ ಮೂಲಕ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಸತೀಶ್‌ ಕುಂಪಲ ಆರೋಪಿಸಿದರು. ಕಾಂಗ್ರೆಸ್‌ ಗೆದ್ದಾಗ ಚುನಾವಣಾ ಪ್ರಕ್ರಿಯೆ ಸರಿಯಾಗಿದೆ ಎಂದು ಹೇಳುವ ಪಕ್ಷ, ಬಿಜೆಪಿ ಗೆದ್ದಾಗ ಮಾತ್ರ ಅಕ್ರಮದ ಆರೋಪ ಮಾಡುತ್ತಿದೆ ಎಂದು ಟೀಕಿಸಿದರು.

ಕೇಂದ್ರ ನಾಯಕತ್ವದ ಸೂಚನೆಯಂತೆ ಎಸ್‌ಐಆರ್‌ ಕುರಿತು ಜನರಿಗೆ ವಾಸ್ತವಾಂಶ ತಿಳಿಸುವ ನಿಟ್ಟಿನಲ್ಲಿ ಪಾದಯಾತ್ರೆ, ಯುವ ಸಂವಾದ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಅಭಿಯಾನಗಳ ಅನುಷ್ಠಾನಕ್ಕಾಗಿ ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಪುತ್ತೂರು ಅವರ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದೆ ಎಂದು ತಿಳಿಸಿದರು.

ಜನಪರ ಹೋರಾಟಕ್ಕೆ ಮಾಧ್ಯಮ ಪ್ರತಿನಿಧಿಗಳು ಕೂಡ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದ ಅವರು, ಅಕ್ಟೋಬರ್‌ 25ರಿಂದ ನವೆಂಬರ್‌ 15ರೊಳಗೆ ಜಿಲ್ಲೆಯ ವಿವಿಧ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಪಕ್ಷದ ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ವಿಕಾಸ್ ಪುತ್ತೂರು, ಪ್ರಸನ್ನ ಮಾರ್ತ, ಶಾಂತಿಪ್ರಸಾದ್ ಹೆಗ್ಡೆ, ರವೀಂದ್ರ ಶೆಟ್ಟಿ ಉಳಿದೊಟ್ಟು, ಕವಿತಾ, ಪೂರ್ಣಿಮಾ , ವಸಂತ ಪೂಜಾರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು

SHARE
Loading spinner

Leave a Reply

Your email address will not be published. Required fields are marked *

error: Content is protected !!